ADVERTISEMENT

ಪಂಚಮಸಾಲಿಗಳಿಗೆ 2ಎ ಮೀಸಲಾತಿ ಕಲ್ಪಿಸದಿದ್ದರೆ ಅ.1ರಿಂದ ಸತ್ಯಾಗ್ರಹ

ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 16:44 IST
Last Updated 10 ಆಗಸ್ಟ್ 2021, 16:44 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ದಾವಣಗೆರೆ: ‘ಇತರೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಕೇಂದ್ರ ಸರ್ಕಾರವುಮತ್ತೆ ರಾಜ್ಯ ಸರ್ಕಾರಗಳಿಗೇ ನೀಡುತ್ತಿರುವುದರಿಂದ ರಾಜ್ಯ ಸರ್ಕಾರ ಮಾತು ನೀಡಿದಂತೆ ಸೆಪ್ಟೆಂಬರ್‌ ಒಳಗೆ ಪಂಚಮಸಾಲಿ ಸಮಾಜಕ್ಕೆ ‘2 ಎ’ ಮೀಸಲಾತಿಯನ್ನು ಕೊಡಬೇಕು. ಇಲ್ಲದಿದ್ದರೆ ಅಕ್ಟೋಬರ್‌ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಸತ್ಯಾಗ್ರಹ ಆರಂಭಿಸಲಾಗುವುದು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಗಳಿಗೆ ಈ ಹಿಂದೆ ಇದ್ದ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿರುವುದನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸ್ವಾಗತಿಸಿದ ಸ್ವಾಮೀಜಿ, ‘ಕೇಂದ್ರ ಸರ್ಕಾರದ ಈ ಕ್ರಮದಿಂದ ಮೀಸಲಾತಿ ನೀಡಲು ಯೋಗಾಯೋಗ ಕೂಡಿಬಂದಿದೆ. ಕೂಡಲೇ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಂಡು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

‘ಮೀಸಲಾತಿಗಾಗಿ ಪಾದಯಾತ್ರೆ ನಡೆಸಿದಾಗ ಆಗಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆರು ತಿಂಗಳ ಒಳಗೆ ಮೀಸಲಾತಿ ನೀಡುವುದಾಗಿ ಅಧಿವೇಶನದಲ್ಲೇ ಮಾತು ನೀಡಿದ್ದರು. ಅಂದು ಯಡಿಯೂರಪ್ಪ ಅವರ ಮನವೊಲಿಸಿದ್ದ ಬಸವರಾಜ ಬೊಮ್ಮಾಯಿ ಅವರೇ ಈಗ ಮುಖ್ಯಮಂತ್ರಿಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿರುವ ಬಸವರಾಜ ಬೊಮ್ಮಾಯಿ ಅವರ ಮೇಲೆ ಪಂಚಮಸಾಲಿ ಸಮಾಜದ ಋಣಭಾರ ಇದೆ. ಹೀಗಾಗಿ ಮುಂದಿನ ತಿಂಗಳ ಒಳಗೆ ‘2 ಎ’ ಮೀಸಲಾತಿಯನ್ನು ಕಲ್ಪಿಸುವ ಮೂಲಕ ಸಮಾಜದ ಋಣವನ್ನು ತೀರಿಸಬೇಕು’ ಎಂದು ಸ್ವಾಮೀಜಿ ಮನವಿ ಮಾಡಿದರು.

ADVERTISEMENT

‘ಹುಬ್ಬಳ್ಳಿಯಲ್ಲಿ ಆಗಸ್ಟ್‌ 12ರಂದು ಪಂಚಮಸಾಲಿ ಹೋರಾಟಗಾರರ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ಅಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಆಗಸ್ಟ್‌ 26ರಿಂದ ಸೆಪ್ಟೆಂಬರ್‌ 30ರವರೆಗೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಆ.26ರಂದು ಚಾಮರಾಜನಗರದ ಮಲೆಮಾದೇಶ್ವರದಿಂದ ಈ ಅಭಿಯಾನ ಆರಂಭಿಸಲಾಗುವುದು’ ಎಂದು ಸ್ವಾಮೀಜಿ ಮಾಹಿತಿ ನೀಡಿದರು.

**

ತಮ್ಮ ಅಧಿಕಾರಾವಧಿಯಲ್ಲಿ ಅವಕಾಶವಿದ್ದರೂ ಯಡಿಯೂರಪ್ಪ ಅವರು ಮೀಸಲಾತಿ ಕಲ್ಪಿಸಲಿಲ್ಲ. ಪಂಚಮಸಾಲಿ ಸಮಾಜದವರಿಗೆ ಸಿಗಬೇಕಾಗಿದ್ದ ಮುಖ್ಯಮಂತ್ರಿ ಸ್ಥಾನವನ್ನೂ ತಪ್ಪಿಸಿದರು ಎಂಬ ಭಾವನೆ ಸಮುದಾಯದಲ್ಲಿ ಮೂಡಿದೆ.

– ಬಸವಜಯ ಮೃತ್ಯುಂಜಯ ಸ್ವಾಮೀಜಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.