ADVERTISEMENT

ರಾಜ್ಯಪಾಲರ ಕಚೇರಿ ದುರುಪಯೋಗ ಮಾಡಿದರೆ, ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ: ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 10:20 IST
Last Updated 31 ಜುಲೈ 2024, 10:20 IST
<div class="paragraphs"><p>ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಭೂಕುಸಿತ ವೀಕ್ಷಿಸಿದ&nbsp;ಸಚಿವ ಕೃಷ್ಣ ಬೈರೇಗೌಡ</p></div>

ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಭೂಕುಸಿತ ವೀಕ್ಷಿಸಿದ ಸಚಿವ ಕೃಷ್ಣ ಬೈರೇಗೌಡ

   

ಹಾಸನ: ಪ್ರತಿಪಕ್ಷಗಳು ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ, ನಾವು ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬುಧವಾರ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಭೂಕುಸಿತ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ಅರ್ಜಿಗಳನ್ನು ಕೊಟ್ಟು, ರಾಜ್ಯಪಾಲದಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಸಿ, ಏನಾದರೂ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ADVERTISEMENT

ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿವಾದಗಳಲ್ಲಿ ಸಿಲುಕಿಸಿ ಸರ್ಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ಆದರೆ ನಮಗೂ ಸಂವಿಧಾನ ಇದೆ. ಈ ದೇಶದಲ್ಲಿ ಜನ ಸಂವಿಧಾನದ ಪರವಾಗಿ ಮತ ಕೊಟ್ಟಿದ್ದಾರೆ. ಸಂವಿಧಾನದ ರಕ್ಷಣೆ ನಮಗೂ ಇದೆ ಎಂದರು.

ರಾಜ್ಯದಲ್ಲಿ ಕನ್ನಡಿಗರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರತಿಪಕ್ಷಗಳು ಇಲ್ಲಸಲ್ಲದ ವಿವಾದಗಳನ್ನು ಸೃಷ್ಟಿ ಮಾಡುತ್ತ ಸರ್ಕಾರದವನ್ನು ಬುಡಮೇಲು ಮಾಡಲು ಹೊರಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ರಾಜ್ಯಗಳಲ್ಲಿ ಈ ರೀತಿ ಪ್ರಕರಣಗಳು ನಡೆದಾಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯಪಾಲರ ಕಚೇರಿ ದುರುಪಯೋಗ ಮಾಡಿ, ನಮ್ಮ ಸರ್ಕಾರದ ಮೇಲೆ ಪಿತೂರಿ ಮಾಡಿದರೆ ನಾವು ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ. ಅಷ್ಟೇ ಅಲ್ಲ ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದು ಹೋರಾಟ ಮಾಡಲು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.

ಬಿಜೆಪಿಯವರು ಹತಾಶರಾಗಿದ್ದಾರೆ. ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌, ಬಿಜೆಪಿಯ ಕೇಂದ್ರ ಸಚಿವರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು, ನಮ್ಮ ಸರ್ಕಾರ ಬೀಳಿಸಲು ಒಂದಾಗುತ್ತಿದ್ದಾರೆ ಎಂದು ದೂರಿದರು.

ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಎಲ್ಲ ಸವಾಲುಗಳನ್ನು ಎದುರಿಸಲು ತಯಾರಿದ್ದೇವೆ. ಏನು ಮಾಡುತ್ತಾರೋ ಮಾಡಲಿ ಎಂದು ಸವಾಲು ಹಾಕಿದರು.

ಈಗ ಅವರಲ್ಲೇ ಜಗಳ ಶುರುವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕು. ಅದಕ್ಕಾಗಿ ಬೀದಿ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಈ ಸರ್ಕಾರ ಅಲ್ಲಾಡಿಸಬೇಕು ಎಂದು ಹಗಲುಗನಸು ಕಾಣುತ್ತಿರುವ ಪ್ರತಿಪಕ್ಷಗಳ ಆಸೆ ಈಡೇರುವುದಿಲ್ಲ. ಇ.ಡಿ ಆಯಿತು, ಈಗ ರಾಜ್ಯಪಾಲರ ಕಚೇರಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ನಾವು ಆಯೋಗ ರಚನೆ ಮಾಡಿದ್ದೇವೆ. ತನಿಖೆ ಮಾಡಲಿ. ಮುಡಾದಲ್ಲಿ ಹೆಚ್ಚು ಸೈಟ್‌ಗಳನ್ನು ತೆಗೆದುಕೊಂಡಿರುವುದು ಬಿಜೆಪಿ, ಜೆಡಿಎಸ್‌ನವರು. ಸಾವಿರಾರು ಸೈಟ್‌ಗಳು, ಸಾವಿರಾರು ಬದಲಿ ಜಮೀನುಗಳನ್ನು ತೆಗೆದುಕೊಂಡಿರುವುದು ಅವರೇ. ಆದರೆ ನಮ್ಮ ಕಡೆಗೆ ಬೆರಳು ತೋರಿಸುತ್ತಿದ್ದಾರೆ. ಅವರಿಗೆ ಕೇವಲ ಅಧಿಕಾರ ದಾಹ ಹೆಚ್ಚಾಗಿದೆ ಎಂದು ಕಿಡಿಕಾರಿದರು.

ಬಡವರ ಪರವಾಗಿ ಇರುವ ಕಾಂಗ್ರೆಸ್ ಸರ್ಕಾರವನ್ನು ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಏನಾದರೂ ಮಾಡಿ ಬಡವರ ಪರ ಇರುವ ಸರ್ಕಾರವನ್ನು ಬುಡಮೇಲು ಮಾಡಲು ಯತ್ನ ನಡೆಸುತ್ತಿದ್ದಾರೆ. ಇದು ಪಿತೂರಿಯ ಒಂದು ಭಾಗ ಅಷ್ಟೇ ಎಂದರು.

ವಾಲ್ಮೀಕಿ ಹಗರಣ ಮುಚ್ಚಿ ಹಾಕಿದರು ಎಂದು ಯತ್ನಾಳ್ ಹೇಳಿದ್ದಾರೆ. ಇನ್ನೊಂದು ಕಡೆ ಪಾದಯಾತ್ರೆ ಬೇಕಾಗಿಲ್ಲ ಎಂದು ಜೆಡಿಎಸ್‌ನವರು ಹೇಳುತ್ತಿದ್ದಾರೆ. ಏಕೆಂದರೆ ಅವರೇ ಹೆಚ್ಚು ಫಲಾನುಭವಿಗಳು. ತನಿಖೆ ಮಾಡಿದರೆ ಹೆಚ್ಚು ಹೊರಗೆ ಬರುವುದು ಅವರದ್ದೇ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ನಮ್ಮ ಸರ್ಕಾರ ದೃಢವಾಗಿದೆ. ಆ ದಿಕ್ಕಿನಲ್ಲಿ ನಾವು ಕೆಲಸ ಮುಂದುವರಿಸುತ್ತೇವೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.