ADVERTISEMENT

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 18:23 IST
Last Updated 3 ಡಿಸೆಂಬರ್ 2022, 18:23 IST
   

ಹುಬ್ಬಳ್ಳಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಚುನಾವಣಾ ಆಮಿಷ ಕೋರ್ಟ್‌ಗೆ ಮೊರೆ: ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರಿಗೆ ಹಣ, ವಸ್ತುಗಳನ್ನು ಹಂಚುವ ವಿಷಯವನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯವನ್ನು ನ್ಯಾಯಾಲಯಕ್ಕೆ ಪಕ್ಷ ಕೊಂಡೊಯ್ಯಲಿದೆ. ಇಂತಹ ಆಮಿಷ ಪ್ರಕರಣಗಳನ್ನು ಪತ್ತೆ ಹಚ್ಚುವ ಸಲುವಾಗಿಯೇ ಬೆಂಗಳೂರಿನಲ್ಲಿ ವಾರ್‌ರೂಂ ಆರಂಭಿಸಲಾಗಿದ್ದು, 400 ಯುವಕರು ಇದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ವಕ್ಫ್‌ಬೋರ್ಡ್‌ ಶಿಕ್ಷಣ ಸಂಸ್ಥೆ ಆರಂಭಿಸಿ ಅದಕ್ಕೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂಬ ಮಾನ್ಯತೆ ಪಡೆಯಲಿ. ಆದರೆ, ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ಶಿಕ್ಷಣ ಸಂಸ್ಥೆ ಆರಂಭಿಸುವುದು ಸರಿಯಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಎಲ್ಲ ಜಾತಿ– ಧರ್ಮದವರಿಗೂ ಅವಕಾಶ ಇರಬೇಕು ಎಂದು ‍ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.