ಹೈಕೋರ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಜಾಹೀರಾತು, ಹೋರ್ಡಿಂಗ್ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಹೀರಾತುಗಳು ಬೈ–ಲಾ 2024ರ ಅಧಿಸೂಚನೆ ಜಾರಿಗೆ ತಂದಿರುವುದನ್ನು ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ದಾಖಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ.
ಈ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಾಹೀರಾತುಗಳು ಬೈ–ಲಾ 2024ರ ಅಧಿಸೂಚನೆಗೆ ರಾಜ್ಯಪಾಲರು ಈಗಾಗಲೇ ಅಂಕಿತ ಹಾಕಿದ್ದಾರೆ. ಆಗಸ್ಟ್ 28ರಂದು ಅಧಿಸೂಚನೆ ಪ್ರಕಟಿಸಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಅರ್ಜಿದಾರರ ಪರ ಹಿರಿಯ ವಕೀಲ ಜಿ.ಆರ್.ಮೋಹನ್ ಅವರು, ‘ಅಕ್ರಮ ಜಾಹೀರಾತು, ಹೋರ್ಡಿಂಗ್, ಫ್ಲೆಕ್ಸ್ ಅವಳವಡಿಸುವವರ ವಿರುದ್ಧ ದಂಡನೀಯ ಕ್ರಮ ಕೈಗೊಳ್ಳಲು ಅವಕಾಶವಿರುವ ಬೈ–ಲಾದ 15ನೇ ನಿಯಮವನ್ನು ಜಾರಿಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬೆಂಗಳೂರು ಪೊಲೀಸ್ ಕಮಿಷನರ್‌ಗೆ ನಿರ್ದೇಶಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬಹುದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಎಲ್ಲ ಅರ್ಜಿದಾರರ ಪರ ವಕೀಲರ ವಾದಗಳನ್ನು ದಾಖಲಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಿತು.
‘ಕರ್ನಾಟಕ ಸಾರ್ವಜನಿಕ ಸ್ಥಳಗಳ ವಿರೂಪ ನಿಷೇಧ ಕಾಯ್ದೆ–1982ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ರೂಪಿಸಿ ಅವುಗಳನ್ನು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿ ಬೆಂಗಳೂರಿನ ಮಾಯಿಗೇ ಗೌಡ; ಅಕ್ರಮ ಜಾಹೀರಾತು, ಹೋರ್ಡಿಂಗ್‌ಗಳ ಸಂಬಂಧ ಕೈಗೊಂಡಿರುವ ಕ್ರಮದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಳವಡಿಸಿರುವ ಅಕ್ರಮ ಜಾಹೀರಾತು, ಹೋರ್ಡಿಂಗ್, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ನಿರ್ದೇಶಿಸಬೇಕು’ ಎಂದು ಕೋರಿ ರಾಜು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.