ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ, ಮಾಜಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಸಂಬಂಧ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಂಗಳವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಸಿಬಿಐ ಪರ ವಕೀಲೆ ಹೇಮಾ ಕಾರಂತ್, ಐದು ಪ್ರತ್ಯೇಕ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರುಪಡಿಸುವ ಅಗತ್ಯ ಇದೆ. ಹಾಗಾಗಿ, ಆರೋಪಿ ಜನಾರ್ದನ ರೆಡ್ಡಿ ಅವರನ್ನು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲು ಆದೇಶಿಸಬೇಕು’ ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ನಗರದ ಪರಪ್ಪನ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಿ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.