ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ಬೊಕ್ಕಸಕ್ಕೆ ಉಂಟಾಗಿರುವ ಕೋಟ್ಯಂತರ ರೂಪಾಯಿ ಆರ್ಥಿಕ ನಷ್ಟವನ್ನು ವಸೂಲಿ ಮಾಡಲು ರಾಜ್ಯವ್ಯಾಪಿ ಒಂದೇ ವಸೂಲಾತಿ ಪ್ರಾಧಿಕಾರ ರಚಿಸಬೇಕು, ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು ಸೇರಿದಂತೆ ಒಟ್ಟು 12 ಶಿಫಾರಸುಗಳ ವರದಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ನೇತೃತ್ವದ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಫಾರಸು ಮಾಡಲು ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ಈ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಸಮಿತಿಯು ಮೂರು ಸಭೆಗಳನ್ನು ನಡೆಸಿ, 35 ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.
ವಸೂಲಾತಿ ಪ್ರಾಧಿಕಾರ ರಚಿಸುವ ಸಂಬಂಧ ಹೊಸ ಕಾಯ್ದೆ ರೂಪಿಸುವ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಇಲಾಖೆಯು ಕರಡು ಮಸೂದೆಯನ್ನು ಸಿದ್ಧಪಡಿಸಿ ಸಮಿತಿಯ ಮುಂದೆ ಈಗಾಗಲೇ ಮಂಡಿಸಿದೆ. ಸಚಿವ ಸಂಪುಟದ ಅನುಮೋದನೆ ಪಡೆಯಲು ಆ ಕರಡು ಮಸೂದೆಯನ್ನೂ ವರದಿಯ ಜೊತೆಗೆ ಮುಖ್ಯಮಂತ್ರಿಗೆ ಸಲ್ಲಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಗಣಿ ಅಕ್ರಮಗಳ ಪ್ರಕರಣಗಳನ್ನು ವಿಚಾರಣೆ ನಡೆಸಲು ರಾಜ್ಯದಲ್ಲಿ ಪ್ರತ್ಯೇಕವಾದ ವಿಶೇಷ ನ್ಯಾಯಾಲಯ ಇಲ್ಲ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಮತ್ತು ಭಾರತೀಯ ದಂಡ ಸಂಹಿತೆಯಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಹಾಗೂ ಸೆಷನ್ಸ್ ಕೋರ್ಟ್‌ನಲ್ಲಿ (ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ) ದಾಖಲಿಸಿರುವ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಕೋರ್ಟ್‌ಗಳಲ್ಲಿ ಎಸಿಬಿ, ಲೋಕಾಯುಕ್ತ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಜೊತೆಗೆ ಎಸ್‌ಐಟಿ ದಾಖಲಿಸಿರುವ ಅಕ್ರಮ ಗಣಿಗಾರಿಕೆ ಪ್ರಕರಣಗಳ ವಿಚಾರಣೆಯೂ ನಡೆಯುತ್ತಿದೆ. ಹೀಗಾಗಿ, ಅಕ್ರಮ ಗಣಿಗಾರಿಕೆ ಪ್ರಕರಣಗಳ ವಿಲೇವಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ಸಮಿತಿಯು ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.
ಎಸ್‌ಐಟಿ ಈ ನ್ಯಾಯಾಲಯದಲ್ಲಿ ದಾಖಲಿಸುವ ಅಕ್ರಮ ಗಣಿಗಾರಿಗೆ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ, ಸರ್ಕಾರಕ್ಕೆ ದೊಡ್ಡ ಮೊತ್ತದ ಆರ್ಥಿಕ ನಷ್ಟ ಉಂಟಾದ ಪ್ರಕರಣಗಳಾಗಿದ್ದು, ಆ ನಷ್ಟವನ್ನು ತ್ವರಿತಗತಿಯಲ್ಲಿ ವಸೂಲಾತಿ ಮಾಡಲು ಅನುಕೂಲವಾಗುವಂತೆ, ಗಣಿ ಪ್ರಕರಣಗಳಿಗೆ ಸೀಮಿತವಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸುವುದು ಸೂಕ್ತವಾಗಿದೆ. ಅಲ್ಲದೆ, ಈ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಗಣಿ ಪ್ರಕರಣಗಳಲ್ಲಿ ಪರಿಣತಿ ಹೊಂದಿರುವ ಕಾನೂನು ಅಧಿಕಾರಿಗಳ ತಂಡವನ್ನು ರಚಿಸಬೇಕು. ಬೆಂಗಳೂರು ಹಾಗೂ ನವದೆಹಲಿಯ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸುವ ಸಂಬಂಧ ಇಂತಹ ಎರಡು ಪ್ರತ್ಯೇಕ ತಂಡಗಳನ್ನು ಎಸ್‌ಐಟಿ ಅಡಿಯಲ್ಲಿ ಸ್ಥಾಪಿಸಬೇಕು ಎಂದು ಸಮಿತಿಯು ವರದಿಯಲ್ಲಿ ಹೇಳಿದೆ.
ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಮಧ್ಯವರ್ತಿಗಳು, ಖಾಸಗಿ ವ್ಯಕ್ತಿಗಳ ವಿರುದ್ಧ ಲೋಕಾಯುಕ್ತ ಶಿಫಾರಸಿನಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಎಸ್‌ಐಟಿ ದಾಖಲಿಸುವ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ತ್ವರಿತಗತಿಯಲ್ಲಿ ಸಮರ್ಥಿಸಿಕೊಳ್ಳಲು ಇಲಾಖೆಗಳ ಜೊತೆ ಸಮನ್ವಯ ಸಾಧಿಸಲು ಮೇಲುಸ್ತುವಾರಿ ಸಮಿತಿ ರಚಿಸಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಶಿಫಾರಸು ಮಾಡಲು ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ಜುಲೈ 5ರಂದು ಸರ್ಕಾರ ರಚಿಸಿತ್ತು. ಗೃಹ ಸಚಿವ ಜಿ. ಪರಮೇಶ್ವರ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಈ ಸಮಿತಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.