ಬೆಂಗಳೂರು: ಅಕ್ರಮ ಗಣಿಗಾರಿಕೆಯ ತನಿಖೆಗೆ ರಚಿಸಲಾಗಿದ್ದ ಲೋಕಾಯುಕ್ತ ಪೊಲೀಸ್‌ನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅವಧಿಯನ್ನು 2026ರ ಜುಲೈ 2ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಗಣಿಗಾರಿಕೆಯಲ್ಲಿನ ಅಕ್ರಮಗಳ ತನಿಖೆಗೆ 2013ರಲ್ಲಿ ಎಸ್‌ಐಟಿ ರಚಿಸಲಾಗಿತ್ತು. ತನಿಖೆಗೆ ಹೆಚ್ಚಿನ ಕಾಲಾವಕಾಶ ಅಗತ್ಯ ಇದ್ದುದ್ದರಿಂದ ಎಸ್‌ಐಟಿಯ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿತ್ತು.
ಇದೇ ಜುಲೈ 1ಕ್ಕೆ ಎಸ್‌ಐಟಿಯ ಅವಧಿ ಪೂರ್ಣಗೊಳ್ಳಬೇಕಿತ್ತು. ಆದರೆ ತನಿಖೆಗೆ ಮತ್ತಷ್ಟು ಕಾಲಾವಕಾಶ ಬೇಕಿದ್ದು, ಇನ್ನೂ ಒಂದು ವರ್ಷ ವಿಸ್ತರಿಸಬೇಕು ಎಂದು ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.
ಎಸ್‌ಐಟಿಯು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಒಟ್ಟು 110 ಪ್ರಕರಣಗಳನ್ನು ದಾಖಲಿಸಿದ್ದು, 94 ಪ್ರಕರಣಗಳಲ್ಲಿ ಅಂತಿಮ ವರದಿ ಸಲ್ಲಿಸಿದೆ. 62 ದೋಷಾರೋಪ ಪಟ್ಟಿ ಮತ್ತು 28 ಪೂರಕ ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದೆ. 12 ಪ್ರಕರಣಗಳಲ್ಲಿ ತನಿಖೆ ಮುಂದುವರಿದಿದೆ. ಒಟ್ಟು 1.81 ಕೋಟಿ ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂಬುದನ್ನು ಪತ್ತೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.