ಹುಬ್ಬಳ್ಳಿ: ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ತಪ್ಪಿದೆ’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಟೀಕಿಸಿದರು.
‘ಸಾರಿಗೆ ನೌಕರರನ್ನೂ ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸಬೇಕು. 7ನೇ ವೇತನ ಆಯೋಗದಂತೆ ಎಲ್ಲ ಸೌಲಭ್ಯ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಸೌಲಭ್ಯಗಳನ್ನು ನೀಡದೇ ಬರೀ ವೇತನ ಪರಿಷ್ಕರಣೆಗೆ ಕ್ರಮ ಕೈಗೊಂಡರೆ ಒಪ್ಪಲ್ಲ. ರಾಜ್ಯದಾದ್ಯಂತ ಸಾರಿಗೆ ನೌಕರರು ಉಗ್ರ ಪ್ರತಿಭಟನೆ ನಡೆಸುವರು’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಲು ಕೇಂದ್ರ ಸರ್ಕಾರವು ಕಾನೂನು ಖಾತ್ರಿ ನೀಡಬೇಕು ಎಂಬುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜನವರಿ 13ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಧರಣಿ ನಡೆಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.