ಸತೀಶ್ ಸೈಲ್
ಬೆಂಗಳೂರು: ‘ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಪ್ರಕರಣದಲ್ಲಿನ ಪ್ರಮುಖ ಅಪರಾಧಿಯಾದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಕಠಿಣ ಜೈಲು ಶಿಕ್ಷೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದೇ ಆದಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರದ ಷರತ್ತುಗಳನ್ನು ವಿಧಿಸಬೇಕು’ ಎಂದು ಹೈಕೋರ್ಟ್‌ನಲ್ಲಿ ಸಿಬಿಐ ಪ್ರತಿಪಾದಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಕೋರಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ‘ಶಿಕ್ಷೆಯನ್ನು ಸಂಪೂರ್ಣ ತಡೆಹಿಡಿಯುವುದು ಸಲ್ಲದು. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಅಪರಾಧಿಗೆ ಷರತ್ತುಗಳನ್ನು ವಿಧಿಸಿ ಶಿಕ್ಷೆ ತಡೆಹಿಡಿಯುವ ಕುರಿತು ಪರಿಶೀಲಿಸಬಹುದು’ ಎಂದು ಮನವಿ ಮಾಡಿದರು. ಇದನ್ನು ಆಲಿಸಿದ ನ್ಯಾಯಪೀಠ, ಇದೇ 23ರೊಳಗೆ ಈ ಕುರಿತಂತೆ ಆದೇಶಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.