ADVERTISEMENT

ನಾಲ್ಕು ವರ್ಷಗಳಲ್ಲಿ 6.80 ಲಕ್ಷ ಮನೆ ನಿರ್ಮಾಣ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 19:30 IST
Last Updated 14 ಮಾರ್ಚ್ 2023, 19:30 IST
ವಿ. ಸೋಮಣ್ಣ
ವಿ. ಸೋಮಣ್ಣ   

ಬೆಂಗಳೂರು: 2019ರಿಂದ ಈವರೆಗೆ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟು 6.80 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ 5.22 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಇದಕ್ಕಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ₹ 8,239.61 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ನಗರ ವಿಭಾಗದಲ್ಲಿ 1.62 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ’ ಎಂದರು.

2021–22ನೇ ಸಾಲಿನಲ್ಲಿ ಐದು ಲಕ್ಷ ಹೊಸ ಮನೆಗಳನ್ನು ಮಂಜೂರು ಮಾಡಲಾಗಿತ್ತು. 2.68 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 5,072 ಎಕರೆ ಜಮೀನನ್ನು ನಿವೇಶನಗಳ ಹಂಚಿಕೆಗಾಗಿ ಕಾಯ್ದಿರಿಸಲಾಗಿದೆ. 1.48 ಲಕ್ಷ ನಿವೇಶನಗಳ ಹಂಚಿಕೆಗೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ADVERTISEMENT

ಅತಿವೃಷ್ಟಿ ಮತ್ತು ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆಗಳ ನಿರ್ಮಾಣಕ್ಕೆ ₹ 2,780.26 ಕೋಟಿ ಬಿಡುಗಡೆ ಮಾಡಲಾಗಿದೆ. ಅಲೆಮಾರಿ, ಅರೆ ಅಲೆಮಾರಿ ಮತ್ತು ಗೊಲ್ಲ ಸಮುದಾಯಗಳ ವಸತಿರಹಿತರಿಗೆ ಮನೆ 49,991 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ನಿರ್ಮಾಣ ಯೋಜನೆ ಪ್ರಗತಿಯಲ್ಲಿದೆ. 2,250 ಮನೆಗಳನ್ನು ಶೀಘ್ರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.