ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿದ್ದು, ಆಯಾ ಜಿಲ್ಲೆಗಳಲ್ಲೇ ಕೈಗಾರಿಕೆ ಸ್ಥಾಪಿಸಲು ಉದ್ಯಮಿಗಳು ಮನಸ್ಸು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಬೆಂಗಳೂರಿನಲ್ಲೇ ಉದ್ದಿಮೆ ಸ್ಥಾಪನೆಗೆ ಒಲವು ತೋರುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೂ 192 ಎಕರೆ ಮಂಜೂರಾಗಿದೆ. ಇನ್ನೂ 280 ಎಕರೆ ಬೇಡಿಕೆ ಸಲ್ಲಿಸಲಾಗಿದೆ. ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘ ಗಮನಕ್ಕೆ ತಂದಿದೆ. ಇಂತಹ ಪ್ರಕರಣಗಳಿಗೆ ಅವಕಾಶ ನೀಡಬಾರದು. ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ವಿವಾದಗಳಿರುವಂತಹ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ. ವಿವಾದಮುಕ್ತ ಜಾಗವನ್ನೇ ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಉದ್ದಿಮೆದಾರರಿಗೆ ನೀಡಬೇಕಿರುವ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು. ಕೆಐಎಡಿಬಿ ಇ-ಖಾತಾ ಹಂಚಿಕೆಯ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಉದ್ದಿಮೆದಾರರು ಮನವಿ ಮಾಡಿದರು.
ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.