ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿ ವಿವಿಧ ದೂರುಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಪತ್ರಾಂಕಿತ ವ್ಯವಸ್ಥಾಪಕರನ್ನು ತನಿಖಾ ಸಮಿತಿ ಒಳಗೊಂಡಿದೆ. 30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಕಸಾಪ ಹಾಲಿ ಅಧ್ಯಕ್ಷ ಮಹೇಶ ಜೋಶಿ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಅವರ ಅವಧಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದ್ದು, ಪರಿಷತ್ತಿನ ಸದಸ್ಯರಿಗೆ ವಿನಾಕಾರಣ ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಅವರು ನಡೆಸಿದ ಹಣಕಾಸಿನ ಅವ್ಯವಹಾರ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸಿ, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸುವಂತೆ ದೂರುದಾರರು ಆಗ್ರಹಿಸಿದ್ದರು ಎಂದು ತಿಳಿಸಲಾಗಿದೆ.
ಪರಿಷತ್ತಿಗೆ ಕೂಡಲೇ ಆಡಳಿತಾಧಿಕಾರಿ ನೇಮಿಸಲು ಒತ್ತಾಯಿಸಿರುವ ದೂರುದಾರರು, ಅಕ್ರಮಗಳ ಬಗ್ಗೆ ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧಿಕಾರಿಗಳ ಸಮಿತಿ ರಚಿಸುವಂತೆ ಮನವಿ ಮಾಡಲಾಗಿತ್ತು. ಆದ್ದರಿಂದ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.