ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಕಾರ್ಯಚಟುವಟಿಕೆ ವಿಸ್ತರಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನ ಹಳ್ಳಿಯಲ್ಲಿನ 81 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಭೂ ಸ್ವಾಧೀನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ದೇವನಹಳ್ಳಿ, ಬೆಂಗಳೂರು ಮತ್ತು ಹೈದ್ರಾಬಾದ್‌ನ ಭೂ ಮಾಲೀಕರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಒಂದು ವರ್ಷದ ಅವಧಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕಿತ್ತು. ಆದರೆ, ನಿಯಮಗಳನ್ನು ಉಲ್ಲಂಘಿಸಿ ಸ್ವಾಧೀನ ಪ್ರಕ್ರಿಯೆ ನಡೆಸಿ ಅಂತಿಮ ಅಧಿಸೂಚನೆ ಅಂಗೀಕರಿಸಲಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಅರ್ಜಿದಾರರ ಜಮೀನುಗಳ ಸ್ವಾಧೀನಕ್ಕೆ 2010ರ ಜನವರಿ 28ರಂದು ಪ್ರಾಥಮಿಕ ಹಾಗೂ 2011ರ ಮೇ 30ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಭೂ ಮಾಲೀಕರಿಗೆ 2013ರ ಜುಲೈ 19ರಂದು ಪರಿಹಾರವನ್ನೂ ಘೋಷಣೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.