ADVERTISEMENT

ಧ್ಯಾನದಿಂದ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುವುದು ಹಾಸ್ಯಾಸ್ಪದ: ಬಿ.ಸಿ. ನಾಗೇಶ್

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 19:46 IST
Last Updated 5 ನವೆಂಬರ್ 2022, 19:46 IST
ಬಿ.ಸಿ. ನಾಗೇಶ್‌
ಬಿ.ಸಿ. ನಾಗೇಶ್‌   

ಬೆಂಗಳೂರು: ‘ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು 'ಕುಗ್ಗಿ ಹೋಗುತ್ತಾರೆ' ಎನ್ನುತ್ತಿರುವುದು ಹಾಸ್ಯಾಸ್ಪದ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ವಿವರಿಸುವಿರಾ’ ಎಂದೂ ಕೇಳಿದ್ದಾರೆ.

‘ಕೋವಿಡ್‌ನಿಂದ ಎರಡು ವರ್ಷ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ’ ಎಂದೂ ಅವರು ವಿವರಿಸಿದ್ದಾರೆ.

ADVERTISEMENT

‘ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು, ಉಪನ್ಯಾಸಕರ ಸೇವೆ ಪಡೆಯಲಾಗಿದೆ. ಅರ್ಜಿ ಹಾಕದವರು, ಪರೀಕ್ಷೆ ಬರೆಯದವರನ್ನು ಶಿಕ್ಷಕರಾಗಿ ನೇಮಿಸಿ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಅಪ‘ಕೀರ್ತಿ’ ನಿಮ್ಮ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲಬೇಕಲ್ಲವೇ? ಭ್ರಷ್ಟಾಚಾರ, ಸಾಲು, ಸಾಲು ಹಗರಣಗಳಲ್ಲಿ ಮಿಂದೆದ್ದಿರುವುದು ಯಾರೆಂದು ರಾಜ್ಯದ ಜನತೆಗೆ ತಿಳಿದಿದೆ’ ಎಂದೂ ಕೆಣಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.