ADVERTISEMENT

ಆಸ್ಪತ್ರೆಗಳಿಗೆ ಹೆಚ್ಚಿನ ಆಮ್ಲಜನಕ: ಸೂಚನೆ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 21:07 IST
Last Updated 19 ಏಪ್ರಿಲ್ 2021, 21:07 IST
   

ಬೆಂಗಳೂರು: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವುದನ್ನು ಕಡಿಮೆ ಮಾಡಿ ಆಸ್ಪತ್ರೆಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಕೆ ಮಾಡಬೇಕು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್‌ ರೋಗಿಗಳಿಗೆ ಆಮ್ಲಜನಕ ಪೂರೈಕೆ ಮತ್ತು ಲಭ್ಯತೆ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಶೆಟ್ಟರ್‌, ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಮ್ಲಜನಕದ ಉತ್ಪಾದನೆ ಆಗುತ್ತಿದೆ. ಬೆಂಗಳೂರು ನಗರದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಉತ್ಪಾದನೆ ಆಗುತ್ತಿದೆ. ಆದರೆ ಸಿಲಿಂಡರ್‌ಗಳ ಕೊರತೆ ಇದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬೆಂಗಳೂರನ್ನು ತಲುಪುವ ಆಮ್ಲಜನಕವನ್ನು ಸರಿಯಾದ ರೀತಿಯಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಸೂಕ್ತ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

ADVERTISEMENT

ಆಮ್ಲಜನಕ ಉತ್ಪಾದಕರೊಂದಿಗೆ ಸಮಾಲೋಚನೆ ನಡೆಸಿ. ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಅವುಗಳಿಗೆ ಪರಿಹಾರ ಸೂಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದೂ ಶೆಟ್ಟರ್‌ ಹೇಳಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ಅಕ್ಕಪಕ್ಕದ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅದನ್ನು ಇಲ್ಲಿಯೇ ಬಳಸಬೇಕು. ಇದಕ್ಕಾಗಿ ಆಮ್ಲಜನಕ ಉತ್ಪಾದಿಸುವ ಉದ್ಯಮಗಳಿಗೆ ಅಗತ್ಯ ಸೂಚನೆ ನೀಡಬೇಕು. ರಾಜ್ಯಕ್ಕೆ ಬೇಕಾಗಿರುವ ಸಿಲಿಂಡರ್‌ಗಳನ್ನು ಒದಗಿಸಲು ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದೂ ಹೇಳಿದರು.

ಸಭೆಯಲ್ಲಿ ಆಮ್ಲಜನಕ ಉತ್ಪಾದಕರು ಮತ್ತು ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳು ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.