ADVERTISEMENT

ಮಂಗಳೂರಿನಲ್ಲಿ ವಾಟರ್ ಮೆಟ್ರೊ ಯೋಜನೆ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 16:07 IST
Last Updated 23 ಏಪ್ರಿಲ್ 2025, 16:07 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ವಾಟರ್ ಮೆಟ್ರೊ ಯೋಜನೆ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿ ಸಭೆಯಲ್ಲಿ ‘ಕರ್ನಾಟಕ ಜಲ ಸಾರಿಗೆ ನೀತಿ 2024’ ಬಿಡುಗಡೆ ಮಾಡಲಾಯಿತು. ಈ ವೇಳೆ, ಮಂಗಳೂರಿನ ಗುರುಪುರ–ನೇತ್ರಾವತಿ ನದಿಯಲ್ಲಿ ಆರಂಭಿಸಲಿರುವ ವಾಟರ್‌ ಮೆಟ್ರೊ ಯೋಜನೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದರು.

ಸಾಗರಮಾಲಾ ಯೋಜನೆಯಡಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೂ ಒಪ್ಪಿಗೆ ನೀಡಿದರು.

ADVERTISEMENT

ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಮತ್ತು ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಹಾಗೂ ಅತಿಕ್ರಮಣ ಮಾಡಿದವರನ್ನು ಕೂಡಲೇ ತೆರವುಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಉತ್ತರಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋನ್‌ ಸರ್ವೇ ಮಾಡಿಸಿ, ಮೂರು ತಿಂಗಳ ಒಳಗೆ ವರದಿ ನೀಡುವಂತೆ ಅಲ್ಲಿನ ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಆಂಧ್ರಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳುನಾಡು, ಗುಜರಾತ್‌ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಸಭೆಯಲ್ಲಿ ಒಳನಾಡು ಮತ್ತು ಜಲಸಾರಿಗೆ ಸಚಿವ ಮಂಕಾಳ ವೈದ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತು ಇತರ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.