ADVERTISEMENT

25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ಸಂಪರ್ಕ: ಬಿಎಸ್‌ವೈ

‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 22:30 IST
Last Updated 22 ಜೂನ್ 2021, 22:30 IST
‘ಜಲಜೀವನ್‌ ಮಿಷನ್‌’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭಾಗವಹಿಸಿದ್ದರು
‘ಜಲಜೀವನ್‌ ಮಿಷನ್‌’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭಾಗವಹಿಸಿದ್ದರು   

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021–22 ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಈವರೆಗೆ 435 ಬಹು ಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2021–22 ನೇ ಸಾಲಿಗೆ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆ ಮೇರೆಗೆ ಯೋಜನೆ ಅನುಷ್ಠಾನಗೊಳಿಸಬೇಕು. ಇದು ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಯಡಿಯೂರಪ್ಪ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಹಿರಿಯ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.