ಬಿ.ವೈ.ವಿಜಯೇಂದ್ರ
- ಫೇಸ್‌ಬುಕ್ ಚಿತ್ರ
ಮೈಸೂರು: ರಾಜ್ಯದ ಮೆಡಿಕಲ್ ಮಾಫಿಯಾಗೆ ಸಹಾಯ ಮಾಡಲು ಜನೌಷಧ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ ದೂರಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಕೋಪ. ಅವರ ಫೋಟೊ ಕಂಡರೆ ಆಗುವುದಿಲ್ಲ. ಆ ಫೋಟೊ ಕಾಣಬಾರದೆಂದೇ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿಸಿದ್ದಾರೆ ಎಂದು ದೂರಿದರು.
ಬಡವರ ಅನುಕೂಲಕ್ಕಾಗಿ ಜನೌಷಧ ಕೇಂದ್ರಗಳನ್ನು ತೆರೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿ. ಅಲ್ಲಿರುವ ಔಷಧಿ ಸ್ಟಾಕ್ ಬಗ್ಗೆ ಪರಿಶೀಲನೆ ನಡೆಸಲಿ ಎಂದರು.
ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಪ್ರಧಾನಿ ಮೋದಿಗೆ ಹಾಗೂ ಬಡವರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರಿ ವೈದ್ಯರು ಹೊರಗಡೆ ಔಷಧಿ ತೆಗೆದುಕೊಳ್ಳಲು ಬರೆದುಕೊಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಔಷಧಿ ಕೊಡುತ್ತಿಲ್ಲ. ಇದರಿಂದ ಬಡವರಿಗೆ ಅನ್ಯಾಯ ಆಗುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಯೋಜನೆಗಳಿಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಈ ಮೂಲಕ ಜನರಲ್ಲಿ ಕೇಂದ್ರದ ಬಗ್ಗೆ ತಪ್ಪು ಭಾವನೆ ಮೂಡಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಇವರ ಹುಳುಕನ್ನು, ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ. ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದುಡ್ಡು ಸಿಗುತ್ತದೆ ಅಂದರೆ ರಾಜ್ಯ ಸರ್ಕಾರ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಗ್ಯಾರಂಟಿ ಕೊಡುತ್ತಿರುವುದರಿಂದ ಇಂಥದ್ದೆಲಗಲ ಕೆಲಸಕ್ಕೆ ಕೈ ಹಾಕುತ್ತಾರೆ.
ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಗೆ ಕೊಡ್ತೀವಿ ಎಂದು ಅವರೇ ಹೇಳಿರಲಿಲ್ಲವೇ? ಕಿತ್ತುಕೊಳ್ಳಲು ಏನೇನು ಬೇಕು ಅದನ್ನೆಲ್ಲಾ ಮಾಡುತ್ತಿದ್ದಾರೆ. ಪರಿಣತರು ಅಯೋಗ್ಯ ಐಡಿಯಾಗಳನ್ನು ಕೊಡುತ್ತಿದ್ದಾರೆ. ಅದನ್ನು ಇವರು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿದೆ ಎಂಬ ಸಿಎಂ ಹಾಗೂ ಡಿಸಿಎಂ ಹೇಳಿಕೆಯನ್ನು ವ್ಯಂಗ್ಯವಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಾಸಕರು ಹಾರೆ, ಗುದ್ದಲಿಯನ್ನ ತಮ್ಮ ಮನೆಯಲ್ಲಿ ಇಟ್ಟು ಬಿಟ್ಟಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ತಿಂಗಳಿಗೆ ಒಂದು ಗುದ್ದಲಿ ಪೂಜೆ ಆಗುತ್ತಿತ್ತು. ಈಗ ಎರಡು ವರ್ಷದಿಂದ ಅದೆಲ್ಲಾ ಏನೂ ಇಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೆದ್ದಿರುವ ವಿರೋಧ ಪಕ್ಷದ ಹೊಸ ಶಾಸಕರು ಪಾಪಿಗಳು. ಕ್ಷೇತ್ರದ ಅಭಿವೃದ್ಧಿಗೆ ಈ ಸರ್ಕಾರ ಹಣ ಕೊಡುತ್ತಿಲ್ಲ. ಆಡಳಿತ ಪಕ್ಷದ ಶಾಸಕರಿಗೂ ಹಣ ಕೊಡುತ್ತಿಲ್ಲ. ಇದೇ ಕಾರಣಕ್ಕೆ ರಾಜು ಕಾಗೆ ಆತ್ಮಹತ್ಯೆ ಮಾಡಿಕೊಳ್ಳುವ ಮಾತುಗಳನ್ನು ಆಡಿದ್ದಾರೆ. ಹಿರಿಯ ನಾಯಕ ದೇಶಪಾಂಡೆ ಅಸಮಾಧಾನಗೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಂತಹ ಅಯೋಗ್ಯ ಸರ್ಕಾರ ಬಂದ ಮೇಲೆ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಾಗಾಗಿ ಶಾಸಕರು, ಜನರು ಪರದಾಡುತ್ತಿದ್ದಾರೆ. ಖಾಸಗಿ ಸರ್ವೆಯಲ್ಲಿ ಇದು ರುಜುವಾತಾಗಿದೆ. ಈಗ ವಿಧಾನಸಭಾ ಚುನಾವಣೆ ನಡೆದರೆ ಬಿಜೆಪಿ 140ರಿಂದ 150 ಸ್ಥಾನ ಗೆಲ್ಲಲಿದೆ. ರಾಜ್ಯದ ಜನರು ಬೇಸತ್ತಿದ್ದಾರೆ. ಜನರ ಆಸೆಗಳ ಮಣ್ಣು ಪಾಲಾಗಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.