ADVERTISEMENT

ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪರವಾನಗಿ ನವೀಕರಣ: ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 15:52 IST
Last Updated 24 ನವೆಂಬರ್ 2025, 15:52 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪರವಾನಗಿ ನವೀಕರಣ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಔಷಧ ನಿಯಂತ್ರಣ ಇಲಾಖೆಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. 

ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ಪ್ರವೀಣ್ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಔಷಧ ನಿಯಂತ್ರಣ ಇಲಾಖೆ ಔಷಧ ನಿಯಂತ್ರಕ, ಬೆಂಗಳೂರು ದಕ್ಷಿಣ ವಿಭಾಗದ ಸಹಾಯಕ ಔಷಧ ನಿಯಂತ್ರಕ ಮತ್ತು ಪಿಎಂಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿತು. 

ADVERTISEMENT

ನೋಟಿಸ್‌: ಉಡುಪಿ ಜಿಲ್ಲೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಮುಚ್ಚಿಸಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ‘ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ’ಯ ಕುಂದಾಪುರ ತಾಲ್ಲೂಕು ಘಟಕದ ಪ್ರತಿನಿಧಿ ಜಯಕರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಅನಿರುದ್ಧ ಎ.ಕುಲಕರ್ಣಿ ಅವರ ವಾದ ಆಲಿಸಿದ ನ್ಯಾಯಪೀಠ ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಉಡುಪಿ ಜಿಲ್ಲಾ ವೈದ್ಯಾಧಿಕಾರಿ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಉಡುಪಿ ವಿಭಾಗದ ಸಹಾಯಕ ಔಷಧ ನಿಯಂತ್ರಕ ಹಾಗೂ ಕೇಂದ್ರ ಸರ್ಕಾರಿ ಸ್ವಾಮ್ಯದ ಫಾರ್ಮಾಸ್ಯೂಟಿಕಲ್ಸ್ ಆ್ಯಂಡ್ ಮೆಡಿಕಲ್ ಡಿವೈಸೆಸ್ ಬ್ಯೂರೋ ಆಫ್ ಇಂಡಿಯಾಗೆ (ಪಿಎಂಬಿಐ) ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.