ADVERTISEMENT

Karnataka Elections 2023: ‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 22:15 IST
Last Updated 20 ಫೆಬ್ರುವರಿ 2023, 22:15 IST
   

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಈ ಮೂವರೂ ತಮ್ಮ ಬೆಂಬಲಿಗರ ಜೊತೆ ‘ಕೈ’ ಹಿಡಿದರು. ಶಾಸಕ ಜಿ. ಪರಮೇಶ್ವರ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಮುಖಂಡರಾದ ಕೆ.ಎನ್. ರಾಜಣ್ಣ ಇದ್ದರು.

ಸಿದ್ದರಾಮಯ್ಯ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣ ಇದೆ. ಹೀಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಬೇರೆ ಪಕ್ಷಗಳ ಬಹಳ ಜನ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ. ಮಂತ್ರಿಯಾಗಿದ್ದ ಕೆಲವರು ಪಕ್ಷ ಸೇರುವ ಸಂಭವ ಇದೆ’ ಎಂದು ಹೇಳಿದರು.

ADVERTISEMENT

‘ನಾವು ಬಿಜೆಪಿಯವರಂತೆ ಒಳಗೊಂದು ಹೊರಗೊಂದು ಹೇಳುವುದಿಲ್ಲ. ಅವರು ಧರ್ಮ, ಧರ್ಮಗಳ ನಡುವೆ ಬೆಂಕಿ ಹಚ್ಚುವ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.

‘ಮೊದಲಿನಿಂದಲೂ ಬಿಜೆಪಿ ಧರ್ಮಗಳ ನಡುವೆ ಒಡಕು ಮೂಡಿಸಿ, ಸಮಾಜದಲ್ಲಿ ಶಾಂತಿ ಕದಡುತ್ತಿದೆ. ಇದರಿಂದ ಬೇಳೆ ಬೇಯಿಸಿಕೊಳ್ಳುತ್ತಿದೆ. ಬಿಜೆಪಿಯವರು ಎಲ್ಲಾ ವರ್ಗಗಳ ವಿರೋಧಿಗಳು’ ಎಂದು ಜಿ. ಪರಮೇಶ್ವರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.