
ಹಾಸನ: ಪಕ್ಷದ ಬೆಳ್ಳಿ ಹಬ್ಬ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಯತ್ನದ ಭಾಗವಾಗಿ ಜೆಡಿಎಸ್ ಪಕ್ಷದಿಂದ, ಶನಿವಾರ (ಜ.24) ಇಲ್ಲಿನ ಹೊರವಲಯದ ಹುಡಾ ಬಡಾವಣೆಯಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯ ಘಟದ ಅಧ್ಯಕ್ಷರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ, ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮುಖಂಡರಾದ ಭೋಜೇಗೌಡ, ಸಾ.ರಾ.ಮಹೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಸುಮಾರು 2 ಲಕ್ಷ ಜನರು ಭಾಗವಹಿಸಬಹುದು ಎಂದು ಜೆಡಿಎಸ್ ಮುಖಂಡರು ಅಂದಾಜು ಮಾಡಿದ್ದಾರೆ. ಮುಖ್ಯ ವೇದಿಕೆಯ ಮುಂಭಾಗದಲ್ಲಿ 1 ಲಕ್ಷ ಹಾಗೂ ಅಕ್ಕಪಕ್ಕದ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕರ್ತರನ್ನು ಕರೆತರಲು 1,300 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಊಟದ ವ್ಯವಸ್ಥೆಗಾಗಿ ಒಂದು ಸಾವಿರ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಒಟ್ಟು 1,400 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಶಾಸಕರಾದ ಎಚ್.ಡಿ.ರೇವಣ್ಣ ಮತ್ತು ಸ್ವರೂಪ್ ಪ್ರಕಾಶ್ ಹಾಗೂ ಸ್ಥಳೀಯ ಮುಖಂಡರು ಶುಕ್ರವಾರ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು. ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಸಮಾವೇಶದ ಫ್ಲೆಕ್ಸ್, ಬ್ಯಾನರ್, ಕಟೌಟ್‌ಗಳು ರಾರಾಜಿಸುತ್ತಿವೆ.
ಶನಿವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಹುಟ್ಟೂರು ಹರದನಹಳ್ಳಿಗೆ ಬರಲಿರುವ ಎಚ್.ಡಿ.ದೇವೇಗೌಡರು, ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.