ADVERTISEMENT

ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದು ಸಣ್ಣತನದ‍ ‍ಪರಮಾವಧಿ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 21:27 IST
Last Updated 14 ಆಗಸ್ಟ್ 2022, 21:27 IST

ಬೆಂಗಳೂರು: ‘ರಾಜ್ಯ ಬಿಜೆಪಿ ಸರ್ಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರೂ ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್‌ ಕಾರ್ಯಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಅವರ ಕೊಡುಗೆ ಸಾಕಷ್ಟಿದೆ. ಆದರೆ ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರೂ ಅವರು ಯಾವುದೇ ಪಕ್ಷಕ್ಕೆ ಸೇರಿರಲಿ, ಆದರೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದು. ಅಂತಹವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಕ್ಲಿಷ್ಟಕರ ಪರಿಸ್ಥಿತಿ ಇತ್ತು. ಆದರೂ ದೇಶವನ್ನು ನೆಹರೂ ಮುಂದಕ್ಕೆ ತೆಗೆದುಕೊಂಡು ಹೋದರು. ಅವರ ಚಿತ್ರಕ್ಕೆ ಕೊಕ್ಕೆ ಹಾಕಿದ ಇವರು ದೇಶಪ್ರೇಮಿಗಳಲ್ಲ. ದೇಶ ಪ್ರೇಮದ ಹೆಸರಿನಲ್ಲಿ ದೇಶವನ್ನು ಛಿದ್ರ ಛಿದ್ರ ಮಾಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಈ ದೇಶ. ಎಲ್ಲ ಕುಟುಂಬಗಳೂ ಶಾಂತಿಯಿಂದ ಬದುಕಬೇಕಿದೆ. ಆದರೆ ಈಗ ಏನಾಗಿದೆ ಎಂದು ಪ್ರಶ್ನಿಸಿದರು.

ಸಾವರ್ಕರ್‌ ಮತ್ತು ಟಿಪ್ಪು ಅವರ ಫ್ಲೆಕ್ಸ್‌ ಹರಿದ ತಕ್ಷಣ ದೇಶದ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.