ADVERTISEMENT

ಕನ್ನಡ ಕಡ್ಡಾಯ ಪ್ರಶ್ನಿಸಿ ಪಿಐಎಲ್‌: ಸರ್ಕಾರ ಸಮರ್ಥವಾಗಿ ವಾದಿಸಲಿ ಎಂದ ಎಚ್‌ಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2021, 14:59 IST
Last Updated 24 ಸೆಪ್ಟೆಂಬರ್ 2021, 14:59 IST
ಎಚ್‌.ಡಿ.ಕುಮಾರಸ್ವಾಮಿ – ಪ್ರಜಾವಾಣಿ ಸಂಗ್ರಹ ಚಿತ್ರ
ಎಚ್‌.ಡಿ.ಕುಮಾರಸ್ವಾಮಿ – ಪ್ರಜಾವಾಣಿ ಸಂಗ್ರಹ ಚಿತ್ರ   

ಬೆಂಗಳೂರು: ‘ಕರ್ನಾಟಕದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಇದರ ವಿರುದ್ಧ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರನ್ನು ಒತ್ತಾಯಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷಾ ಕಲಿಕಾ ಕಾಯ್ದೆ–2015 ಪ್ರಶ್ನಿಸಿ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ 10 ವರ್ಷ ವಯಸ್ಸಿನ ವಿದ್ಯಾರ್ಥಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ಬಗ್ಗೆ ವರದಿಯಾಗಿತ್ತು. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡದಿರುವ ಈ ಕಾಯ್ದೆಯನ್ನೇ ಅಸಂವಿಧಾನಿಕ ಎಂದು ಘೋಷಿಸಬೇಕೆಂದು ವಿದ್ಯಾರ್ಥಿ ಅರ್ಜಿಯಲ್ಲಿ ಕೋರಿದ್ದ.

4ನೇ ತರಗತಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಈ ಅರ್ಜಿ ಸಲ್ಲಿಸಿದ್ದು, ಅವರ ಪರವಾಗಿ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಎನ್. ಸುಜಾತಾ ಪ್ರತಿನಿಧಿಸುತ್ತಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.