ADVERTISEMENT

ಆಗಸ್ಟ್‌ನಲ್ಲಿ ಪಂಚರತ್ನ ಯಾತ್ರೆ: ಎಚ್‌ಡಿಕೆ

ಜೆ.ಪಿ. ಭವನದ ಬಳಿ ಜನತಾ ಮಿತ್ರ ಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 21:05 IST
Last Updated 1 ಜುಲೈ 2022, 21:05 IST
ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್‌.ಮಂಜುನಾಥ್ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ‌ ಜನತಾ ಮಿತ್ರ ಯಾತ್ರೆಗೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಚಾಲನೆ ನೀಡಿದರು. ರಮೇಶ್‌ಗೌಡ, ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ಇದ್ದರು  – ಪ್ರಜಾವಾಣಿ ಚಿತ್ರ
ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್‌.ಮಂಜುನಾಥ್ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ‌ ಜನತಾ ಮಿತ್ರ ಯಾತ್ರೆಗೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಚಾಲನೆ ನೀಡಿದರು. ರಮೇಶ್‌ಗೌಡ, ಎಚ್.ಡಿ. ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ಇದ್ದರು  – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಬರುವ ಆಗಸ್ಟ್‌ನಲ್ಲಿ ಪಂಚರತ್ನ ರಥಯಾತ್ರೆ ಆರಂಭಿಸಿ ಹಳ್ಳಿ –ಹಳ್ಳಿಗೆ ಹೋಗುತ್ತೇನೆ. ಮೂರು ತಿಂಗಳು ಬೆಂಗಳೂರಿಗೆ ಬರುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜೆ.ಪಿ. ಭವನದ ಬಳಿ ಆಯೋಜಿಸಿದ್ದ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹದಿನೈದು ದಿನ ಬೆಂಗಳೂರಿಗೆ ಮೀಸಲಿಟ್ಟಿದ್ದೇನೆ. ಎಲ್ಲೆಡೆ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ಬೆಂಗಳೂರು ನಗರದ ಕಾರ್ಯಕರ್ತರ ಸಮಾವೇಶವನ್ನು ಜುಲೈ 17 ರಂದು ನಡೆಸಲಾಗುವುದು. ಸುಮಾರು ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ’ಎಂದರು.

‘ಬೆಂಗಳೂರಿಗೆ ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದೇನೆ. ಜೆಡಿಎಸ್‌ ಪರ ಒಲವು ಹೊಂದಿರುವ ಮತದಾರರು ಇದ್ದಾರೆ. ಅವರನ್ನು ಭೇಟಿಯಾಗಿ ಪಕ್ಷದ ಕಾರ್ಯಕ್ರಮಗಳು ಮತ್ತು ಉದ್ದೇಶಗಳನ್ನು ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಮುಂದಿನ ಚುನಾವಣೆಯಲ್ಲಿ ಬೆಂಗಳೂರು ನಗರದಿಂದಲೇ ಕನಿಷ್ಠ 17 ಶಾಸಕರು ಜೆಡಿಎಸ್‌ನಿಂದ ಚುನಾಯಿತರಾಗಲಿದ್ದಾರೆ’ ಎಂದುಹೇಳಿದರು.

ADVERTISEMENT

‘ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮೋಸ ಮಾಡಿವೆ. ರಾಜ್ಯದ ತೆರಿಗೆಯಲ್ಲಿ ಸಂಬಳ ಪಡೆಯುವ ಐಎಎಸ್ ಅಧಿಕಾರಿಗಳು ಬಂಡವಾಳ ಹೂಡಿಕೆದಾರರಿಗೆ ಗುಜರಾತ್‌ಗೆ ಕಳುಹಿಸುತ್ತಿದ್ದಾರೆ. ಚುನಾವಣೆ ಸಮೀಪ ಬಂದಾಗ ಎಲ್ಲವನ್ನೂ ವಿವರವಾಗಿ ಮಾತನಾಡುತ್ತೇನೆ. ಡಿಸೆಂಬರ್‌ನಲ್ಲಿ ಚುನಾವಣೆ ಬರುವ ಸಾಧ್ಯತೆಗಳು ಇವೆ’ಎಂದರು.

‘ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು.‌ ಅಧಿಕಾರ ಇದ್ದಾಗ ನಾವು ಅಕ್ರಮವಾಗಿ ಹಣ ಮಾಡಿಲ್ಲ. ಮೂವರು ಶಾಸಕರು ನಮ್ಮ ಪಕ್ಷದವರಿದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್‌ ಗಳಲ್ಲೂ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಭಗವಂತನ ಆಶೀರ್ವಾದದಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿ ಇತಿಹಾಸದ ಪುಟ ಸೇರಿದ್ದೇನೆ. ‌ಈಗಿನ ಸರ್ಕಾರ ಲೂಟಿ ಹೊಡೆಯುತ್ತಿದೆ. ಇದನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ನನಗೆ ಒಂದು ಅವಕಾಶ ಕೊಡಲಿ. ನಮಗೆ ಇಪ್ಪತ್ತು ವರ್ಷ ಬೇಡ ಐದು ವರ್ಷದ ಅವಕಾಶ ಸಾಕು’ ಎಂದು ಅವರುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.