ADVERTISEMENT

ಹಾಸನ: ಪ್ರತಿಭಟನೆ ನಡೆಸದಂತೆ ಜೆಡಿಎಸ್‌ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸೂಚನೆ 

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 9:20 IST
Last Updated 13 ಫೆಬ್ರುವರಿ 2019, 9:20 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಹಾಸನ:ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಇಂದು ಕೆಲವು ವ್ಯಕ್ತಿಗಳು ಶಾಸಕರ ಮನೆಯ ಸಮೀಪ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ‘ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತಿಯಲ್ಲಿಕ್ರಮ ಕೈಗೊಳ್ಳಬೇಕೆಂದು’ ಸೂಚಿಸಿದ್ದಾರೆ.

‘ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ನನಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು’ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ADVERTISEMENT

ನಾಳೆ ಹಾಸನ ಬಂದ್‌ಗೆ ಬಿಜೆಪಿ ಜಿಲ್ಲಾ ಘಟಕ ಚಿಂತನೆ
ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರು ಕಲ್ಲು ತೂರಾಟ ಮಾಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ನಾಳೆ (ಗುರುವಾರ) ನಗರವನ್ನು ಬಂದ್‌ ಮಾಡಲು ಚಿಂತನೆ ನಡೆಸಿದೆ.

ಕಲ್ಲು ತೂರಾಟ ವೇಳೆ ಶಾಸಕರ ಬೆಂಬಲಿಗ ರಾಹುಲ್‌ಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆ ಪ್ರೀತಂ ಗೌಡ ನಿವಾಸದ ಮುಂದೆ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಸ್ಥಳಗೆ ಎಸ್‌ಪಿ ಪ್ರಕಾಶ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೂಂಡಾಗಿರಿಗೆ ಸಿಎಂ ಬೆಂಬಲ: ‘ನಮ್ಮ ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದನೆ ನೀಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಗೂಂಡಾಗಿರಿಗೆ ಬೆಂಬಲ ನೀಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.