
ಬೆಂಗಳೂರು: ‘60 ವರ್ಷ ಮೇಲ್ಪಟ್ಟ ಎಲ್ಲ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವೆಚ್ಚದಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದರು.
ವೈದ್ಯಕೀಯ ಶಿಕ್ಷಣ ಇಲಾಖೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಿರಿಯ ಪತ್ರಕರ್ತರ ವೇದಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
‘ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. ಮುಖ್ಯಮಂತ್ರಿಯವರ ಜೊತೆ ಸಮಾಲೋಚಿಸಿ ಮುಂದಿನ ದಿನಗಳಲ್ಲಿ ಶೇ 25ರಷ್ಟು ಹಣಕ್ಕೂ ರಿಯಾಯಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
‘ನಿವೃತ್ತರಾದವರಿಗೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡುವುದಕ್ಕೆ ನಾವು ಬದ್ಧರಾಗಿದ್ದೇವೆ. ಸಮಾಜಕ್ಕೆ ಕೊಡುಗೆ ನೀಡಿ ವೃತ್ತಿಯಿಂದ ನಿವೃತ್ತರಾಗಿರುವ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ನೀಡುತ್ತಿದ್ದು, ಅದರ ನಿಯಮಗಳನ್ನು ಸರಳಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ನಿವೃತ್ತ ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮದ ಪ್ರತಿನಿಧಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ವತಿಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.
ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಜಯದೇವ ಸಂಸ್ಥೆಯ ನಿರ್ದೇಶಕ ಡಾ.ಬಿ.ದಿನೇಶ್, ಹಿರಿಯ ಪತ್ರಕರ್ತರ ವೇದಿಕೆ ಅಧ್ಯಕ್ಷ ಆರ್.ಪಿ. ಸಾಂಬ ಸದಾಶಿವರೆಡ್ಡಿ, ಎಂ.ಎ. ಪೊನ್ನಪ್ಪ, ವೆಂಕಟೇಶ್ ಪ್ರಸಾದ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.