ADVERTISEMENT

ಐಎಎಸ್‌ ಅಧಿಕಾರಿ ಜೈಲಿಗೆ ಕಳಿಸುತ್ತೇವೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 19:31 IST
Last Updated 6 ಜೂನ್ 2022, 19:31 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ‘ಒಬ್ಬ ಹಿರಿಯ ಐಎಎಸ್ ಅಧಿಕಾರಿಯನ್ನು ಜೈಲಿಗೆ ಕಳುಹಿಸದ ಹೊರತು ಈ ಸರ್ಕಾರ ಎಚ್ಚೆತ್ತುಕೊಳ್ಳುವುದಿಲ್ಲ. ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಇದು ಸಕಾಲ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ.

‘ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ’ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಖುದ್ದು ಹಾಜರಿದ್ದ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್. ಅರ್ಚನಾ ಅವರನ್ನು ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿಗಳು, ‘ಕೋರ್ಟ್ ಆದೇಶ ಪಾಲಿಸದ ಸರ್ಕಾರ ಮತ್ತು ಅಧಿಕಾರಿಗಳ ನಡೆಯಿಂದ ರೋಸಿ ಹೋಗಿದ್ದೇವೆ.ಹಿರಿಯ ಐಎಎಸ್‌ ಅಧಿಕಾರಿ ಜೈಲಿಗೆ ಹೋಗುವ ದಿನ ಯಾವತ್ತು ಬರುತ್ತದೆ ಎಂಬುದು ನಮಗೆ ಗೊತ್ತಿಲ್ಲ’ ಎಂದು ಸರ್ಕಾರಕ್ಕೆ ಕಠಿಣ ಸಂದೇಶ ರವಾನಿಸಿದರು.

ADVERTISEMENT

‘ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಒಂದು ತಿಂಗಳಲ್ಲಿ ಪಾಲಿಸಲಾಗುವುದು’ ಎಂಬ ಹೆಚ್ಚುವರಿ ಅಡ್ವೊಕೇಟ್‌ ಧ್ಯಾನ್‌ ಚಿನ್ನಪ್ಪ ಉತ್ತರಕ್ಕೆಸಮ್ಮತಿ ಸೂಚಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿದೆ. ಮುಂದಿನ ವಿಚಾರಣೆಗೂ ರಾಕೇಶ್ ಸಿಂಗ್ ಮತ್ತು ಅರ್ಚನಾ ಹಾಜರಾಗಬೇಕು ಎಂದು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.