ADVERTISEMENT

ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ

ಎರಡು ಆದೇಶ ಸೃಷ್ಟಿಸಿದ ಗೊಂದಲ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:18 IST
Last Updated 29 ಸೆಪ್ಟೆಂಬರ್ 2020, 21:18 IST

ಬೆಂಗಳೂರು: ಕಾಡುಗೊಲ್ಲ ಸಮುದಾಯದ ಜನರ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕವಾದ ‘ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಲು ಸೋಮವಾರ ಆದೇಶ ಹೊರಡಿಸಲಾಗಿದೆ.

ಕಾಡುಗೊಲ್ಲ ಮತ್ತು ಗೊಲ್ಲ ಸಮುದಾಯದ ಚುನಾಯಿತ ಪ್ರತಿನಿಧಿಗಳು, ರಾಜಕೀಯ ಮುಖಂಡರ ಒತ್ತಡದಿಂದಾಗಿ ಒಂದೇ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಎರಡು ಬಾರಿ ನಿರ್ಧಾರ ಬದಲಿಸಿದ್ದಾರೆ. ಅಂತಿಮವಾಗಿ ಕಾಡುಗೊಲ್ಲರಿಗೆ ಸೀಮಿತವಾಗಿ ಅಭಿವೃದ್ಧಿ ನಿಗಮ ಸ್ಥಾಪನೆಯ ನಿರ್ಧಾರ ಕೈಗೊಂಡಿದ್ದಾರೆ.

‘ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು’ ಎಂದು ಯಡಿಯೂರಪ್ಪ, ಭಾನುವಾರ ವಿಧಾನಸೌಧದಲ್ಲಿ ಹೇಳಿಕೆ ನೀಡಿದ್ದರು. ಆದರೆ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಸೇರಿದಂತೆ ಹಲವರು ಸೋಮವಾರ ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿಮಾಡಿ, ‘ಗೊಲ್ಲ ಅಭಿವೃದ್ಧಿ ನಿಗಮ’ ಎಂಬುದಾಗಿ ಘೋಷಿಸುವಂತೆ ಒತ್ತಡ ಹಾಕಿದ್ದರು. ಆ ಬಳಿಕ ‘ಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆದೇಶ ಹೊರಬಿದ್ದಿತ್ತು ಎಂದು ಹೇಳಲಾಗುತ್ತಿದೆ.

ADVERTISEMENT

ಉಪ ಚುನಾವಣೆ ನಿಗದಿಯಾಗಿರುವ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಡುಗೊಲ್ಲ ಜಾತಿಯ 25ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಅವರ ಮತ ಸೆಳೆಯುವುದಕ್ಕಾಗಿಯೇ ನಿಗಮ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್‌ ಗೌಡ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಸೇರಿದಂತೆ ಹಲವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರ ಮನವೊಲಿಸಿದ್ದಾರೆ. ಆ ಬಳಿಕ ‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಪರಿಷ್ಕೃತ ಆದೇಶ ಹೊರಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.

‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪನೆಯ ಪ್ರಸ್ತಾವವನ್ನು ‘ಗೊಲ್ಲ ಅಭಿವೃದ್ಧಿ ನಿಗಮ’ ಎಂಬುದಾಗಿ ಬದಲಿಸಿದ್ದಕ್ಕೆ ತುಮಕೂರು, ಚಿತ್ರದುರ್ಗ ಸೇರಿದಂತೆ ಕಾಡುಗೊಲ್ಲ ಸಮುದಾಯದ ಜನರು ಹೆಚ್ಚಾಗಿರುವ ಭಾಗಗಳಿಂದ ವಿರೋಧ ವ್ಯಕ್ತವಾಗಿತ್ತು. ಇದೆಲ್ಲವನ್ನೂ ಗಮನಕ್ಕೆ ತಂದ ಬಳಿಕವೇ ಮುಖ್ಯಮಂತ್ರಿಯವರು ಆದೇಶ ಪರಿಷ್ಕರಿಸಲು ಸೂಚನೆ ನೀಡಿದರು ಎಂದು ಕಾಡುಗೊಲ್ಲ ಸಮುದಾಯದ ಮುಖಂಡರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.