ADVERTISEMENT

ಕಾಗಿನೆಲೆ ಪ್ರಾಧಿಕಾರ: ಡಿಸಿ ನೇತೃತ್ವದಲ್ಲಿ ಸಮಿತಿ ರಚಿಸಲು ಸಿದ್ದರಾಮಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 15:38 IST
Last Updated 23 ಸೆಪ್ಟೆಂಬರ್ 2024, 15:38 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಯ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು’ ಎಂದು ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಪ್ರಾಧಿಕಾರದ ಸಭೆಯನ್ನು ಸೋಮವಾರ ನಡೆಸಿದ ಅವರು, ‘ಪ್ರಸಕ್ತ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 13.35 ಕೋಟಿಯ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಈ ವರ್ಷ ಕೈಗೊಳ್ಳಬೇಕಿರುವ ಕಾಮಗಾರಿಗಳ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸಬೇಕು’ ಎಂದು ಹಾವೇರಿ ಜಿಲ್ಲಾಧಿಕಾರಿಗೆ ತಿಳಿಸಿದರು.

ಪ್ರಾಧಿಕಾರದ ಮೂಲನಿಧಿಯಲ್ಲಿ (ಕಾರ್ಪಸ್‌ ಫಂಡ್‌) ₹7 ಕೋಟಿ ಮೊತ್ತಕ್ಕೆ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ ₹4 ಕೋಟಿಗೆ ಅನುಮೋದನೆ ನೀಡಲಾಗಿದೆ. ಪ್ರಾಧಿಕಾರದಲ್ಲಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಹೆಚ್ಚಳ ಕುರಿತು ಕನಿಷ್ಠ ವೇತನ ನಿಯಮಗಳ ಅನುಸಾರ ಪ್ರಸ್ತಾವನೆ ಸಲ್ಲಿಸಬೇಕು. ಪ್ರಾಧಿಕಾರದಲ್ಲಿ ಖಾಲಿಯಿರುವ ನಾಲ್ಕು ಅಧಿಕಾರೇತರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಬೇಕು. ಕನಕದಾಸರ ಜೀವನ ಕುರಿತು ‘ಒಳಾಂಗಣ ವಸ್ತು ಸಂಗ್ರಹಾಲಯʼ ನಿರ್ಮಿಸಲು ಹೊಸ ಪ್ರಸ್ತಾವನೆ ಸಿದ್ಧಪಡಿಸಲು ಮತ್ತು ಬೆಂಗಳೂರಿನ ಬನಶಂಕರಿ ಆರನೇ ಹಂತದಲ್ಲಿ ಪ್ರಾಧಿಕಾರದ ವತಿಯಿಂದ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ಪೂರ್ಣಗೊಳಿಸುವ ದಿಸೆಯಲ್ಲಿ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚಿಸಿದರು.

ADVERTISEMENT

ಕಾಗಿನೆಲೆ ಗ್ರಾಮದಲ್ಲಿ ಕನಕ ಗದ್ದುಗೆ ಸಮೀಪ ಇರುವ ಕನಕ ಸರೋವರ ಅಭಿವೃದ್ಧಿಪಡಿಸಿ, ದೋಣಿ ವಿಹಾರ ಆರಂಭಿಸಲು ಮತ್ತು ಕಾಗಿನೆಲೆ ಕನಕ ಪರಿಸರ ಸ್ನೇಹಿ ಪಾರ್ಕ್‌ ಸಮೀಪ ಐದು ಎಕರೆ ಪ್ರದೇಶದಲ್ಲಿ ಔಷಧಿ ಸಸ್ಯಗಳನ್ನು ಬೆಳೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಚಿವ ಬೈರತಿ ಸುರೇಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ‌, ಶಾಸಕ ಬಸವರಾಜ ಶಿವಣ್ಣನವರ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.