
ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಹಾಗೂ ಆರನೇ ಘಟಕಗಳ ನಿರ್ಮಾಣಕ್ಕೆ ಮೊದಲ ಕಾಂಕ್ರಿಟ್ ಸುರಿಯುವಿಕೆಗೆ ಅಣು ಶಕ್ತಿ ನಿಯಂತ್ರಣ ಮಂಡಳಿ ಅನುಮೋದನೆ ನೀಡಿದೆ. ಇದರಿಂದಾಗಿ, ಕರ್ನಾಟಕದಲ್ಲಿ 700 ಮೆಗಾವಾಟ್ ಅಣು ವಿದ್ಯುತ್ ಸ್ಥಾವರಗಳನ್ನು ನಿರ್ಮಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.
ಎರಡು ಘಟಕಗಳ ನಿರ್ಮಾಣದ ಗುತ್ತಿಗೆಯನ್ನು ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ವಹಿಸಲಾಗಿದೆ. ಐದು ಹಾಗೂ ಆರನೇ ಘಟಕ ನಿರ್ಮಾಣಕ್ಕೆ ₹21,000 ಕೋಟಿ ವೆಚ್ಚವಾಗಲಿದ್ದು, 2031ರ ವೇಳೆಗೆ ಪೂರ್ಣಗೊಳ್ಳಲಿದೆ.
ಇಲ್ಲಿ ತಲಾ 700 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳ ಸ್ಥಾಪನೆಗೆ ಅಣುಶಕ್ತಿ ನಿಯಂತ್ರಣ ಮಂಡಳಿಯು ಈ ಹಿಂದೆ ಅನುಮತಿ ನೀಡಿತ್ತು. ಕೈಗಾ ಘಟಕದ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟವು 2017ರಲ್ಲಿ ಅನುಮೋದನೆ ಕೊಟ್ಟಿತ್ತು. ಈ ಘಟಕಗಳ ನಿರ್ಮಾಣ ಪೂರ್ಣಗೊಂಡ ಬಳಿಕ ಕೈಗಾದಲ್ಲಿ ಒಟ್ಟು 2,280 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಪ್ರಸ್ತುತ ತಲಾ 220 ಮೆಗಾವಾಟ್ ಸಾಮರ್ಥ್ಯದ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 880 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.