ADVERTISEMENT

Karnataka Rains | ಕಲ್ಯಾಣದಲ್ಲಿ ವರ್ಷಧಾರೆ: ಮುಳುಗಿದ ಸೇತುವೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 5:54 IST
Last Updated 20 ಆಗಸ್ಟ್ 2025, 5:54 IST
   

ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆಯಾಗಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸೇತುವೆ, ದೇವಸ್ಥಾನಗಳು ಮುಳುಗಡೆಯಾಗಿವೆ. ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಜಲಾಶಯದಿಂದ ನೀರು ಬಿಟ್ಟಿರುವ ಕಾರಣ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಮುಳುಗಿದೆ. ಇದರಿಂದಾಗಿ ಯಳಗುಂದಿ, ಹಂಚಿನಾಳ, ಕಡದರಗಡ್ಡಿ, ಯರ ಗೋಡಿ ಗ್ರಾಮಗಳ ನೇರ ಸಂಪರ್ಕ ಕಡಿದು ಹೋಗಿದೆ.

ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ತುಂಗಭದ್ರಾ ನದಿಗೆ ಹರಿಬಿಟ್ಟಿರುವುದರಿಂದ ಮಾನ್ವಿ ತಾಲ್ಲೂಕಿನ ತುಂಗಭದ್ರಾ ನದಿಪಾತ್ರದ ಗ್ರಾಮಗಳ ಗ್ರಾಮಸ್ಥರಿಗೆ ಪ್ರವಾಹ ಭೀತಿ ಉಂಟಾಗಿದೆ. ಯಾದಗಿರಿ ತಾಲ್ಲೂಕಿನ ಪಗಲಾಪುರ–ಕೋಯಿಲೂರ ನಡುವಿನ ಹಳ್ಳದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದೆ.

ADVERTISEMENT

ಸತತ ಮಳೆಗೆ ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮಂಗಳವಾರ ನದಿಗೆ ನೀರು ಹರಿಸಿದ ಕಾರಣ ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ ಗ್ರಾಮದ ಮಲ್ಲಿ ಕಾರ್ಜುನ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ.

ಬೀದರ್‌, ಬಸವಕಲ್ಯಾಣ, ಹುಲಸೂರ ಹಾಗೂ ಭಾಲ್ಕಿಯಲ್ಲಿ ಮಳೆಯಾಗಿದೆ. ಕಮಲನಗರ ತಾಲ್ಲೂಕಿನಲ್ಲಿ 2 ಸಾವಿರ ಹಾಗೂ ಔರಾದ್‌ ತಾಲ್ಲೂಕಿನಲ್ಲಿ 1,500 ಹೆಕ್ಟೇರ್‌ ಬೆಳೆ ಹಾಳಾಗಿದೆ. ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಹರಿಸುತ್ತಿರುವ ಕಾರಣ ಜಿಲ್ಲೆಯ ಮಾಂಜ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಭಾಲ್ಕಿ ತಾಲ್ಲೂಕಿನ ಲಖನಗಾಂವ ಗ್ರಾಮದ ಬಳಿ ಮಾಂಜ್ರಾ ನದಿಗೆ ನಿರ್ಮಿಸಿರುವ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಸಂಚಾರ ಬಂದ್ ಆಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಾಳಗಿ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಬೆಣ್ಣೆತೊರಾ ಜಲಾಶಯದ ಹಿನ್ನೀರು ಗ್ರಾಮಕ್ಕೆ ನುಗ್ಗಿದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ಮನೆ, ಅಂಗಡಿಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು
ಬರುತ್ತಿದ್ದು, ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ ನದಿಗೆ 15
ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.