ADVERTISEMENT

'ಕಲ್ಯಾಣ ಕರ್ನಾಟಕಕ್ಕೆ 10 ಸಾವಿರ ಶಿಕ್ಷಕರ ನೇಮಕ ಪ್ರಸ್ತಾವ'

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 20:17 IST
Last Updated 18 ಫೆಬ್ರುವರಿ 2021, 20:17 IST
ಸುರೇಶ್‌ ಕುಮಾರ್‌
ಸುರೇಶ್‌ ಕುಮಾರ್‌   

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯ ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಬಜೆಟ್‍ನಲ್ಲಿ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಗುರುವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿಯ ಅಳವಡಿಕೆ ಉದ್ದೇಶದಿಂದ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆ, 50 ವರ್ಷ ಹಳೆಯ 14,613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ನೀಡುವಂತೆಯೂ ಮನವಿ ಮಾಡಲಾಗಿದೆ’ ಎಂದರು.

‘ಪ್ರತಿ ಸ್ಥಳೀಯ ಸಂಸ್ಥೆಯಿಂದ ಎರಡು ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಿ ಮಾದರಿ ಶಾಲೆಗಳಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಪಂಚಾಯತ್, ವಾರ್ಡ್, ಪಬ್ಲಿಕ್ ಶಾಲೆಗಳ ಸ್ಥಾಪನೆ, ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ, ಶಾಖಾ ಗ್ರಂಥಾಲಯಗಳು, ಮಕ್ಕಳ ಗ್ರಂಥಾಲಯಗಳ ಡಿಜಿಟಲೀಕರಣ, ಗ್ರಂಥಾಲಯ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವಂತೆಯೂ ಪ್ರಸ್ತಾಪ ಸಲ್ಲಿಸಲಾಗಿದೆ’ ಎಂದರು.

ADVERTISEMENT

ಸರ್ಕಾರಿ ಶಾಲೆಗಳ ಅಭಿವೃದ್ಧಿ: ರಾಜ್ಯದ 276 ಕೆಪಿಎಸ್ ಶಾಲೆಗಳನ್ನು ಕೇಂದ್ರೀಯ ವಿದ್ಯಾಲಯ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೋರಿಕೆ ಸಲ್ಲಿಸಲಾಗಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.

ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು: ಸಕಾಲ ಮಿಷನ್ ಕಚೇರಿ ಹುದ್ದೆಗಳ ಹೊಂದಾಣಿಕೆ ಮತ್ತು ಪುನರ್‌ರಚನೆಯೊಂದಿಗೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದು, ತನಿಖಾ ಶಾಖೆ, ತಾಂತ್ರಿಕ ಶಾಖೆ, ತರಬೇತಿ ಶಾಖೆ ಮತ್ತು ಕುಂದುಕೊರತೆ ಹಾಗೂ ಮಾಹಿತಿ, ಪ್ರಚಾರ ಶಾಖೆಗಳನ್ನು ಒಳಗೊಂಡಂತೆ ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು ನೀಡಲು ಕೂಡಾ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಸಕಾಲ ಯೋಜನೆಯಡಿ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಸೇರಿದಂತೆ ದೂರದರ್ಶನ, ರೇಡಿಯೊ, ವೃತ್ತಪತ್ರಿಕೆ ಹಾಗೂ ಬ್ರಾಂಡ್ ಅಂಬಾಸಡರ್ ಮೂಲಕ ಮತ್ತು ವಿವಿಧ ಇಲಾಖೆಗಳ ಮಾಹಿತಿ ಫಲಕಗಳ ಮೂಲಕ ಮಾಹಿತಿ, ಅರಿವು ಮತ್ತು ಸಂವಹನಕ್ಕೆ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.