ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ನಟ ಕಮಲ್ ಹಾಸನ್ ಹೇಳಿಕೆಯನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಖಂಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ' ಎನ್ನುವ ನಿರರ್ಥಕ ಮಾತುಗಳಿಂದ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿರುವ ಕಮಲ್ ಹಾಸನ್ ಅವರು ರಾಹುಲ್ ಗಾಂಧಿ ಅವರಿಗೆ ಮತ್ತು ಅವರ ಮಿತ್ರ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪರಮಾಪ್ತರು ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಸ್ಟಾಲಿನ್ ಅವರ ಮೂಲಕ ಕಮಲ್ ಹಾಸನ್ ಅವರ ಕಿವಿ ಹಿಂಡಿಸಿ ಇನ್ನೆಂದೂ ಕನ್ನಡ ನಾಡು-ನುಡಿಯ ತಂಟೆಗೆ ಬರದಂತೆ ಎಚ್ಚರಿಕೆ ಕೊಡಿಸಬಹುದೇ? ಅಥವಾ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಕ್ಕಿಂತ ಹೈಕಮಾಂಡ್ ಭಕ್ತಿ ಹಾಗು ರಾಜಕೀಯ ಮೈತ್ರಿಯೇ ದೊಡ್ಡದೇ? ಎಂದು ಪ್ರಶ್ನಿಸಿದ್ದಾರೆ.
ದುರಹಂಕಾರದ ಪರಮಾವಧಿ: ವಿಜಯೇಂದ್ರ
ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ,ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ. ದಕ್ಷಿಣ ಭಾರತದಲ್ಲಿ ಸಾಮರಸ್ಯತೆಯನ್ನು ಬೆಸೆಯಬೇಕಾದ ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದರು.
ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಈ ಕೂಡಲೇ ಕಮಲ್ ಹಾಸನ್ ಅವರು ಈ ಕೂಡಲೇ ಬೇಷರತ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.