ADVERTISEMENT

ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವ ಆಚರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

₹34 ಕೋಟಿ ಯೋಜನೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 15:45 IST
Last Updated 29 ಅಕ್ಟೋಬರ್ 2025, 15:45 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪಾರಂಪರಿಕ ತಾಣಗಳನ್ನು ₹ 34 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಗಿದೆ.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ADVERTISEMENT

ಕಾಗಿನೆಲೆಯಲ್ಲಿ ಪ್ರತಿವರ್ಷ ಕನಕ ಉತ್ಸವ ಆಚರಿಸಬೇಕು. ಈ ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ, ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದೂ ಅವರು ನಿರ್ದೇಶನ‌ ನೀಡಿದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆಯನ್ನು ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು.

ಸಚಿವ ಶಿವಾನಂದ ಪಾಟೀಲ, ವಿಧಾನಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.