ADVERTISEMENT

ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ನಿಧನ: ಸಿಎಂ ಸೇರಿದಂತೆ ಗಣ್ಯರ ಸಂತಾಪ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 7:57 IST
Last Updated 15 ಜನವರಿ 2026, 7:57 IST
<div class="paragraphs"><p>ಸಿದ್ದರಾಮಾನಂದ ಸ್ವಾಮೀಜಿ</p></div>

ಸಿದ್ದರಾಮಾನಂದ ಸ್ವಾಮೀಜಿ

   

ಬೆಂಗಳೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

‘ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ADVERTISEMENT

‘ಅಗಲಿದ ಕಾಗಿನೆಲೆ ಕನಕಪೀಠದ ಸ್ವಾಮೀಜಿಗೆ ನಮನ. ದೇವದುರ್ಗ ತಿಂಥಣಿಯ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ಅವರು ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಸ್ವಾಮೀಜಿಯವರು ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಸೇರಿದಂತೆ ಸದಾ ಜನಪರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ಸ್ವಾಮೀಜಿಯವರು ಅಪಾರ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ, ತಿಂಥಿಣಿ ಬ್ರಿಜ್–ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ದುಃಖ ಉಂಟು ಮಾಡಿದೆ. ಧಾರ್ಮಿಕ, ಆಧ್ಯಾತ್ಮಿಕ ಮಾರ್ಗದರ್ಶನದ ಜೊತೆಗೆ ಅನೇಕ ಸಮಾಜಮುಖಿ ಸೇವಾಕಾರ್ಯಗಳಿಗೆ ಅಪಾರ ಕೊಡುಗೆ ನೀಡಿದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಸಿದ್ದರಾಮಾನಂದ ಸ್ವಾಮೀಜಿ ಅವರು ಗುರುವಾರ ಬೆಳಗಿನ ಜಾವ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.

ಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಮತ್ತು ಜಯಮ್ಮ ದಂಪತಿಯ 2ನೇ ಪುತ್ರರು. ಸಿದ್ದರಾಮನಂದ ಸ್ವಾಮೀಜಿಯ ಮೂಲ ಹೆಸರು ಮೋಹನ್ ಪ್ರದಾನ ಎಂದು ತಿಳಿದು ಬಂದಿದೆ. ಆಧ್ಯಾತ್ಮಿಕ ಹಸಿವಿನಿಂದ 18ನೇ ವಯಸ್ಸಿಗೆ ಮನೆ ಬಿಟ್ಟು ಸಂಚಾರ ಮೊದಲು ಜೈನ, ಕ್ರೈಸ್ತ, ಬ್ರಹ್ಮಕುಮಾರಿ ಪಂಥಗಳ ಪ್ರಭಾವಕ್ಕೆ ಒಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.