ಬೆಂಗಳೂರು: ‘ರಾಮನಗರ ಜಿಲ್ಲೆ ಕನಕಪುರ ವ್ಯಾಪ್ತಿಯ ಕೆಂಕೇರಮ್ಮ ಕೆರೆ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ’ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರ ತಾಲ್ಲೂಕು ತಹಶೀಲ್ದಾರ್ ಹೈಕೋರ್ಟ್‌ಗೆ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ‘ಹೈಕೋರ್ಟ್ ನಿರ್ದೇಶನದ ಅನುಸಾರ ಕನಕಪುರ ತಾಲ್ಲೂಕು ತಹಶೀಲ್ದಾರ್ ವಸ್ತುಸ್ಥಿತಿ ವರದಿ ನೀಡಿದ್ದ, 10.33 ಗುಂಟೆ ವಿಸ್ತೀರ್ಣದ ಕೆಂಕೇರಮ್ಮ ಕೆರೆ ಪ್ರದೇಶದಲ್ಲಿ ಒಟ್ಟು 4 ಎಕರೆ 37 ಗುಂಟೆ ಜಾಗ ಒತ್ತುವರಿ ಮಾಡಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಒತ್ತುವರಿ ಜಾಗದಲ್ಲಿ ನಿವೇಶನ ರಚಿಸಿ ಹಂಚಲಾಗಿದೆ ಹಾಗೂ ಸಮುದಾಯ ಭವನ, ಸರ್ಕಾರಿ ಪ್ರಾಥಮಿಕ ಶಾಲೆ ನಿರ್ಮಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ ಈ ಕುರಿತಂತೆ ಅರ್ಜಿದಾರರ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರುವರಿ 16ಕ್ಕೆ ಮುಂದೂಡಿತು.
ಅರ್ಜಿಯೇನು?: ‘ಕೆಂಕೇರಮ್ಮ ಕೆರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಮತ್ತು ಸಂಸದ ಡಿ.ಕೆ.ಸುರೇಶ್ ಬರೆದ ಪತ್ರದ ಮೇರೆಗೆ ಕನಕಪುರ ನಗರಸಭೆಯು ಕೆರೆ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲು ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ (ಎಸ್‌ಡಿಬಿ) ಸ್ವಾಧೀನಕ್ಕೆ ನೀಡಿದೆ’ ಎಂಬುದು ಅರ್ಜಿದಾರರ ಆಕ್ಷೇಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.