ADVERTISEMENT

ಕನ್ನಡತನ ಗೊತ್ತಿಲ್ಲದ ನಟಿಗೆ 'ಶ್ರೀಗಂಧದ' ಸೋಪಿನ ರಾಯಭಾರಿ ಮಾಡಿದ್ದೇಕೆ?: ಯದುವೀರ್

​ಪ್ರಜಾವಾಣಿ ವಾರ್ತೆ
Published 23 ಮೇ 2025, 10:00 IST
Last Updated 23 ಮೇ 2025, 10:00 IST
ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌
ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌   

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾದ ಮೈಸೂರು ಸಾಬೂನು ಮತ್ತು ಮಾರ್ಜಕ ಕಂಪನಿಗೆ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದು ಕಾಂಗ್ರೆಸ್‌ ಸರ್ಕಾರದ ಅವಿವೇಕದ ತೀರ್ಮಾನ ಎಂದು ದೂರಿದ್ದಾರೆ.

1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್‌ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್‌ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಅವರಿಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ತಮನ್ನಾ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ ಗಂಧದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಈ ಕೂಡಲೇ ಈ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಕನ್ನಡಿಗರ ₹6.20 ಕೋಟಿ ರೂಪಾಯಿಯನ್ನು ಉಳಿಸಲಿ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜನರಿಗೆ ನೀಡದೇ ಮಾತು ತಪ್ಪಿರುವ ಕಾಂಗ್ರೆಸ್‌ ಸರ್ಕಾರ, ಈಗ ಪರಭಾಷೆ ನಟಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.