ADVERTISEMENT

ಕನ್ನಡ ಕಡ್ಡಾಯ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 20:22 IST
Last Updated 15 ನವೆಂಬರ್ 2021, 20:22 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ‘ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವ ನಿಲುವು ತಳೆದಿದ್ದೀರಿ ಎಂಬುದನ್ನು ತಿಳಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ, ‘ಸಂಸ್ಕೃತ ಭಾರತಿ ಟ್ರಸ್ಟ್’, ‘ಹಯಗ್ರೀವ ಟ್ರಸ್ಟ್’, ‘ವ್ಯೋಮಾ ಲಿಂಗ್ವಿಸ್ಟಿಕ್ ಲ್ಯಾಬ್ ಫೌಂಡೇಷನ್’ ಹಾಗೂ ‘ಸಂಸ್ಕೃತ ಪ್ರಾಧ್ಯಾಪಕ ಸಂಘ’ಗಳು ಸಲ್ಲಿಸಿರುವಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಎಸ್‌.ಎಸ್.ನಾಗಾನಂದ ಅವರು, ‘ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿರುವರಾಜ್ಯ ಸರ್ಕಾರದ ಕ್ರಮ ಸುಪ್ರೀಂ ಕೋರ್ಟ್‌ನ ಪೂರ್ವ ನಿದರ್ಶನಗಳಿಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ’ ಎಂದು ಪುನರುಚ್ಚರಿಸಿದರು.

ADVERTISEMENT

‘ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಮಾಡಿರುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಯಾವ ಭಾಷೆ ಕಲಿಯಬೇಕು ಎಂಬುದು ವಿದ್ಯಾರ್ಥಿಯ ಇಚ್ಛೆಗೆ ಬಿಟ್ಟ ವಿಚಾರ. ಈ ಕುರಿತು ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾರೆ’ ಎಂದು ವಿವರಿಸಿದರು.

‘ಭಾಷೆಯನ್ನು ಬಲವಂತವಾಗಿ ಕಲಿಸಬಾರದು. ನಾನು ಕನ್ನಡಿಗ, ಕನ್ನಡವನ್ನು ಪ್ರೀತಿಸುತ್ತೇನೆ. ಅಂದಮಾತ್ರಕ್ಕೆ ಹೊರಗಿನಿಂದ ಬಂದವರಿಗೂ ಕನ್ನಡ ಕಲಿಯುವಂತೆ ಒತ್ತಾಯಿಸುವುದು ಸರಿ ಎನಿಸುವುದಿಲ್ಲ. ಅಂತೆಯೇ, ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಸುವುದು ಅಷ್ಟು ಸೂಕ್ತವೂ ಅಲ್ಲ. ಆದ್ದರಿಂದ, ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ,‘ಸರ್ಕಾರದ ಈ ಆದೇಶ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿಲ್ಲ. ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಕನ್ನಡ ಗೊತ್ತಿಲ್ಲದವರಿಗೆ ಸರಳವಾಗಿ ಕನ್ನಡ ಕಲಿಸಲು ಪ್ರತ್ಯೇಕ ಪಠ್ಯವನ್ನೂ ರೂಪಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಕಲಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲು ನಿರಾಕರಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

‘ಕನ್ನಡ ಕಲಿಕೆ ಪ್ರಶ್ನಿಸಿ ಯಾವುದೇ ವಿದ್ಯಾರ್ಥಿ ಈ ಅರ್ಜಿ ಸಲ್ಲಿಸಿಲ್ಲ.ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ. ಬದಲಿಗೆ, ವೈಯಕ್ತಿಕ ಹಿತಾಸಕ್ತಿ ಅರ್ಜಿ ಆದ್ದರಿಂದ ಇದನ್ನು ವಜಾಗೊಳಿಸಬೇಕು’ ಎಂದು ಪ್ರತಿಪಾದಿಸಿದರು.

ಉಭಯ ಬಣಗಳ ವಾದ–ಪ್ರತಿವಾದ ಆಲಿಸಿದ ಪೀಠ, ‘ಕನ್ನಡ ಕಲಿಕೆ ಪ್ರೋತ್ಸಾಹಿಸುವುದೇನೋ ಸರಿ. ಆದರೆ, ಕಡ್ಡಾಯ ಮಾಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿತಲ್ಲದೆ, ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರವು ತನ್ನ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.