ADVERTISEMENT

ಎಂಇಎಸ್‌ ನಿಷೇಧಕ್ಕೆ ಆಗ್ರಹ: ವಿವಿಧ ಸಂಘಟನೆಗಳಿಂದ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 17:56 IST
Last Updated 31 ಡಿಸೆಂಬರ್ 2021, 17:56 IST
ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಾಟಾಳ್ ನಾಗರಾಜ್‌ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು– ಪ್ರಜಾವಾಣಿ ಚಿತ್ರ
ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಾಟಾಳ್ ನಾಗರಾಜ್‌ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು– ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಒತ್ತಾಯಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರ‍್ಯಾಲಿ ನಡೆಸಲು ಪ್ರತಿಭಟನಾಕಾರರು ಉದ್ದೇಶಿಸಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ.

ಪುರಭವನದ ಎದುರು ಸೇರಿದ್ದ ‍ಪ್ರತಿಭಟನಾಕಾರರು ಎಂಇಎಸ್‌ ವಿರುದ್ಧ ಧಿಕ್ಕಾರ ಕೂಗಿದರು. ‘ಬೇಕೆ ಬೇಕು ನ್ಯಾಯ ಬೇಕು’, ‘ನಮ್ಮ ನಾಡ ಧ್ವಜ ಸುಟ್ಟ ಕಿಡಿಗೇಡಿಗಳಿಗೆ ಧಿಕ್ಕಾರ’, ‘420 ಎಂಇಎಸ್‌ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿದರು. ಎಂಇಎಸ್ ಕಿಡಿಗೇಡಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೂ ಉರುಳಾಡಿದರು. ಮುನ್ನೆಚ್ಚರಿಕೆ ದೃಷ್ಟಿಯಿಂದ ಪ್ರತಿಭಟನಾಕಾರರನ್ನು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.

ADVERTISEMENT

‘ಎಂಇಎಸ್‌ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಲೇಬೇಕು. ಈ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದೇವೆ. ಅವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ಕರ್ನಾಟಕ ಬಂದ್‌ ಮುಂದೂಡಿದ್ದೇವೆ’ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದರು.

‘ಮುಖ್ಯಮಂತ್ರಿಯವರು ತಮ್ಮ ಮಾತಿಗೆ ಬದ್ಧರಾಗಬೇಕು. ಎಂಇಎಸ್‌ ನಿಷೇಧಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುತ್ತೇವೆ. ಆಗ ಸಂಧಾನ ಸಭೆ ಕರೆದರೂ ಹೋಗುವುದಿಲ್ಲ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.