
ಬೆಂಗಳೂರು: ರಾಜಧಾನಿಯಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 700 ಮಕ್ಕಳೂ ಸೇರಿ 1,700 ಶಾಲಾ ಮಕ್ಕಳು ಭಾಗಿಯಾಗುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.
‘ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಹಿಂದಿನ ವರ್ಷ 1,100 ಮಕ್ಕಳು ಭಾಗಿಯಾಗಿದ್ದರು. ಈ ಬಾರಿ 1,700 ಮಕ್ಕಳು ಭಾಗವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಮುಖ್ಯಮಂತ್ರಿ ಅವರು ಶಾಲಾ ಶಿಕ್ಷಣ ಇಲಾಖೆಯ ಹಲವು ವಿಶೇಷ ಕಾರ್ಯಕ್ರಮವನ್ನು ಘೋಷಣೆ ಮಾಡುವರು’ ಎಂದರು.
ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಶಿಕ್ಷಕರು ಪರಿಹಾರ ಬೋಧನಾ ತರಗತಿಗಳನ್ನು ತೆಗೆದುಕೊಳ್ಳಲು ಸಹಕಾರಿಯಾಗಿದೆ. ನ.14ರಂದು ಮಕ್ಕಳು, ಪೋಷಕರು, ಶಿಕ್ಷಕರನ್ನು ಒಗ್ಗೂಡಿಸಿ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅಂದು ಶಾಲೆಗಳ ಪ್ರವೇಶ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.