ADVERTISEMENT

ನಾಳೆ ಕನ್ನಡ ರಥ ಜಾಥಾಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 16:26 IST
Last Updated 30 ನವೆಂಬರ್ 2022, 16:26 IST
ಕನ್ನಡ ರಥ
ಕನ್ನಡ ರಥ   

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿಕನ್ನಡ ಜ್ಯೋತಿ ಹೊತ್ತ ಕನ್ನಡ ರಥದ ಜಾಥಾಗೆ ಗುರುವಾರ ಬೆಳಿಗ್ಗೆ 10 ಗಂಟೆಗೆ ಚಾಲನೆ ಸಿಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ತಿಳಿಸಿದೆ.

2023ರ ಜ.6, 7 ಹಾಗೂ 8ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ‘ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವಾಲಯದಲ್ಲಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ರಥಕ್ಕೆ ಚಾಲನೆ ನೀಡಲಾಗುತ್ತದೆ.ಭುವನಗಿರಿಯಿಂದ ಹೊರಟ ಕನ್ನಡ ರಥದ ಜಾಥಾ, ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಹಾವೇರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿಯೂ ಈ ರಥ ಪಾಲ್ಗೊಳ್ಳಲಿದೆ. ಈ ರಥದಲ್ಲಿನ ಜ್ಯೋತಿಯಿಂದಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನ ಉದ್ಘಾಟಿಸುತ್ತಾರೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

‘ಕವಿ ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ.ಕಸಾಪ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ, ಕನ್ನಡದ ಸ್ವಾಭಿಮಾನದ ಸಂಕೇತವಾದ ಕನ್ನಡ ರಥದ ಜಾಥಾವನ್ನು ಹಮ್ಮಿಕೊಳ್ಳುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಲಾಗುತ್ತಿದೆ. ಕನ್ನಡ ರಥ ಜಾಥಾ ಯಶಸ್ವಿಯಾಗಲು ಕನ್ನಡಿಗರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.