ADVERTISEMENT

ಮಾತೃಭಾಷೆಯಲ್ಲಿ ಶಿಕ್ಷಣ: ಪ್ರಧಾನಿಗೆ ಕಸಾಪ ಪತ್ರ

ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಲು ಭೈರಪ್ಪ, ಕಂಬಾರ, ಬಳಿಗಾರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 22:47 IST
Last Updated 5 ಆಗಸ್ಟ್ 2020, 22:47 IST
   

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ– 2020’ರಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ವಿಷಯದಲ್ಲಿ ಸೂಕ್ತ ಆದ್ಯತೆ ಸಿಕ್ಕಿಲ್ಲ. ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕ್ರಮಕೈಗೊಳ್ಳಬೇಕು‘ ಎಂದು ಆಗ್ರಹಿಸಿ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಪತ್ರ ಬರೆದಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಜತೆಗೆ ಸಾಹಿತಿ ಎಸ್‌.ಎಲ್. ಭೈರಪ್ಪ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅವರು ಕೂಡ ಪತ್ರದಲ್ಲಿ ಮನವಿ ಮಾಡಿದ್ದಾರೆ.

‘ಶಿಕ್ಷಣ ಮಾಧ್ಯಮದ ಕುರಿತು ಗಂಭೀರವಾಗಿ ಪರಿಗಣಿಸಿ, ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿಯೇ ಶಿಕ್ಷಣ ಕೊಡುವ ಕುರಿತು ನಿರ್ಧಾರ ಕೈಗೊಳ್ಳಬೇಕು. ನೂತನ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಅಗ್ರಸ್ಥಾನ ದೊರೆತಿಲ್ಲ. ಹೀಗಾಗಿ ಈ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ವಿಶೇಷ ಕಾನೂನು ಜಾರಿಮಾಡಿ, ಅಲ್ಲಿನ ರಾಜ್ಯ ಭಾಷೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ಇಲ್ಲಿಯೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣಕ್ಕೆ ಮುಂದಾಗಬೇಕು. 15 ವರ್ಷಗಳು ಕರ್ನಾಟಕದಲ್ಲಿದ್ದು, ಕನ್ನಡ ಮಾತನಾಡಲು, ಓದಲು ಹಾಗೂ ಬರೆಯಲು ಬರುವವರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ನಿಯಮವನ್ನು ಜಾರಿ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.