ADVERTISEMENT

ಉತ್ತರ ಕರ್ನಾಟಕ ಭಾಗಕ್ಕೆ 9 ಇಲಾಖೆ ಸ್ಥಳಾಂತರಿಸಲು ಅನುಮೋದನೆ: ಕುಮಾರಸ್ವಾಮಿ

‘ಇಡೀ ರಾಜ್ಯದ ಅಭಿವೃದ್ಧಿಯನ್ನು ಸಮಷ್ಟಿಯ ದೃಷ್ಟಿಯಿಂದ ನೋಡು ಸಂಕಲ್ಪ ನಮ್ಮ ಸರ್ಕಾರದ್ದು’

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 13:36 IST
Last Updated 4 ಜನವರಿ 2019, 13:36 IST
   

ಧಾರವಾಡ: ಯಾವುದೇ ತಾರತಮ್ಯ ಎಸಗದೆ ಇಡೀ ರಾಜ್ಯದ ಅಭಿವೃದ್ಧಿಯನ್ನು ಸಮಷ್ಟಿಯ ದೃಷ್ಟಿಯಿಂದ ನೋಡುವ, ಅನುಷ್ಠಾನಗೊಳಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಸಂಕಲ್ಪ ನಮ್ಮ ಸರ್ಕಾರದ್ದು. ಹೀಗಾಗಿ 9 ಸರ್ಕಾರಿ ಇಲಾಖೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಲು ಈಗಾಗಲೇ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಮತ್ತು ಕೃಷಿಗೆ ನೀರು ಒದಗಿಸಲು ಆದ್ಯತೆ ನೀಡಲಾಗಿದೆ. ಈಚೆಗೆ ದೆಹಲಿಗೆ ಭೇಟಿ ನೀಡಿದಾಗ ಪ್ರಧಾನಿಯನ್ನು ಭೇಟಿಯಾಗಿ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಮನವಿ ಮಾಡಿದ್ದೇನೆ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪನ್ನು ಗೆಜೆಟ್ ಅಧಿಸೂಚನೆ ಹೊರಡಿಸಿ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಕೂಲ ಕಲ್ಪಿಸಲು ಮನವಿ ಮಾಡಲಾಗಿದೆ ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿಗೆ ಕಿತ್ತೂರು ಚೆನ್ನಮ್ಮನ ಹೆಸರು ಇಡಲು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೆನೆ. ವಿಜಯಪುರ, ಕಾರವಾರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶವಿದ್ದು, ಕಲಬುರ್ಗಿ ಮತ್ತು ಬೀದರ್‌ ವಿಮಾನ ನಿಲ್ದಾಣಗಳ ಕಾರ್ಯಾರಂಭಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಏರ್ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದ ಅನುಮೋದನೆ ಹಾಗೂ ತಾಂತ್ರಿಕ ಅಡಚಣೆಗಳ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದೂ ಹೇಳಿದರು.

ADVERTISEMENT

ಕೊಪ್ಪಳ ಮತ್ತು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆತ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯವಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು.

ಮಲೆನಾಡು ಕರಾವಳಿ ಭಾಗದಲ್ಲಿ ಈ ಬಾರಿ ಅತಿವೃಷ್ಟಿ ಕಾಡಿದೆ. ರಾಜ್ಯದ ಒಟ್ಟು 156 ತಾಲ್ಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಬರಪೀಡಿತ ಪ್ರದೇಶಗಳಲ್ಲಿ ಮೇವು ಕುಡಿಯುವ ನೀರು, ಉದ್ಯೋಗ ಅವಕಾಶಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇಸ್ರೇಲ್‌ ಮಾದರಿ ಕೃಷಿ ಯೋಜನೆ ಜಾರಿ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ನಮಗೆ ಕೃಷಿಯೇ ಪ್ರಮುಖ ಜೀವನೋಪಾಯ. ಹೀಗಾಗಿ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿದೆ. ಇಸ್ರೇಲ್‌ ಮಾದರಿ ಕೃಷಿ ಯೋಜನೆಯನ್ನು ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಐದು ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದವು ಎಂದು ಗಮನ ಸೆಳೆದರು.

ನಾಡಿನ ಅಭಿವೃದ್ಧಿಯ ದೃಷ್ಟಿಯಿಂದ ಉದ್ಯೋಗ ಸೃಷ್ಟಿಯತ್ತ ಗಮನ ಹರಿಸಲಾಗಿದೆ. ಹೈದರಾಬಾದ್‌ ಕರ್ನಾಟಕದ 4 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಲಕ್ಷದಂತೆ ಒಂಬತ್ತು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.