
ಬೆಂಗಳೂರು: 'ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯಗೊಳಿಸುವ ಅಲ್ಲಿನ ಸರ್ಕಾರದ ಪ್ರಸ್ತಾಪಿತ 'ಮಲಯಾಳಿ ಭಾಷಾ ಮಸೂದೆ-2025' ಜಾರಿಗೊಳಿಸುವುದರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ಧ್ವನಿ ಎತ್ತುತ್ತಾರಾ? ಕನ್ನಡಿಗರ ಪರ ನಿಲ್ಲುತ್ತಾರಾ?' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾಗಿ ಸತ್ತರೂ, ವಯನಾಡಿನಲ್ಲಿ ಪ್ರಕೃತಿ ವಿಕೋಪ ಉಂಟಾದರೂ, ಮಲಯಾಳಿಗಳ ಪರವಾಗಿ ಕರ್ನಾಟಕ ಸರ್ಕಾರದ ಮೇಲೆ ಸವಾರಿ ಮಾಡುವ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ 1ರಿಂದ 10ನೇ ತರಗತಿಯವರೆಗೆ ಮಲಯಾಳ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಲಯಾಳಿ ಭಾಷಾ ಮಸೂದೆ-2025ರ ವಿರುದ್ಧ ಧ್ವನಿ ಎತ್ತುವ ಮೂಲಕ ಈಗ ಕನ್ನಡಿಗರ ಪರ ನಿಲ್ಲುತ್ತಾರಾ?' ಎಂದು ಕೇಳಿದ್ದಾರೆ.
'ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ? ಅಕ್ರಮ ವಲಸಿಗರು ಕರ್ನಾಟಕದ ಭೂಮಿಯನ್ನು ಒತ್ತುವರಿ ಮಾಡಿಕೊಂಡರೂ, 'ಮಾನವೀಯತೆ' ದೃಷ್ಟಿಯಿಂದ ಮನೆ ಕೊಡಬೇಕು ಎಂದು ರೋಹಿಂಗ್ಯಗಳು, ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ಕೆ.ಸಿ. ವೇಣುಗೋಪಾಲ್ ಅವರ ಹೃದಯ ಈಗ, ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.
'ಕರ್ನಾಟಕದ ಸ್ವಾಭಿಮಾನ, ಆತ್ಮಗೌರವಕ್ಕೆ ಪದೇ ಪದೇ ಧಕ್ಕೆ ತರುತ್ತಿರುವ ಕಾಂಗ್ರೆಸ್ ಪಕ್ಷದ ಕೇರಳ ಪಟಾಲಂ, ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.