ನಟ ಜಗ್ಗೇಶ್ ಮತ್ತು ಕಮಲ್ ಹಾಸನ್
ಬೆಂಗಳೂರು: ‘ಕನ್ನಡ ತಮಿಳಿನಿಂದ ಹುಟ್ಟಿರುವುದು’ ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಚಿತ್ರರಂಗದ ಗಣ್ಯರು ಕಮಲ್ ಹಾಸನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
‘ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಎಂಬುದನ್ನು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ಅವರನ್ನು ಮೆಚ್ಚಿಕೊಂಡಿದ್ದೇವೆ. ಆದರೆ, ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಅವರ ಮಾತನ್ನು ನಾನು ಒಪ್ಪುವುದಿಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ‘ ಎಂದು ನಟ ಜಗ್ಗೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.
ಕಮಲ್ ಹಾಸನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ‘ಕನ್ನಡಕ್ಕೆ ದೀರ್ಘ ಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ಗೊತ್ತಿಲ್ಲ’ ಎಂದು ತಿರುಗೇಟು ಕೊಟ್ಟಿದ್ದಾರೆ.
'ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ' ಎನ್ನುವ ನಿರರ್ಥಕ ಮಾತುಗಳಿಂದ ಕಮಲ್ ಹಾಸನ್ ಅವರು ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.
‘ತಮ್ಮ ಮಾತೃಭಾಷೆಯನ್ನು ವೈಭವೀಕರಿಸುವ ಪ್ರಯತ್ನದಲ್ಲಿ ಕನ್ನಡವನ್ನು ಅಗೌರವ ಮಾಡಿರುವುದು ಸರಿಯಲ್ಲ. ಹೇಳಿಕೆ ಸಂಬಂಧ ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
‘ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಹಿರಂಗಪಡಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.