ADVERTISEMENT

ನನ್ನ ಉತ್ಸವ ಬೇಡ, ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 9:27 IST
Last Updated 13 ಜುಲೈ 2022, 9:27 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ ಹುಟ್ಟುಹಬ್ಬದ ಸಮಯದಲ್ಲಿ ಅಭಿಮಾನಿಗಳು ಜಾಹೀರಾತು ನೀಡುತ್ತೇವೆ ಎಂದಾಗಲೂ ಬೇಡ ಎಂದಿದ್ದೆ. ನನ್ನ ಕುಟುಂಬದ ಸಮೇತ ಕೇದಾರನಾಥಕ್ಕೆ ಹೋಗಿ ಅಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಬಂದೆ’ ಎಂದರು.

‘ನಾನು ಅಧ್ಯಕ್ಷನಾಗಿ ಅಧಿಕಾರ ತೆಗೆದುಕೊಂಡ ದಿನವೇ, ಯಾರೂ ಕೂಡ ನನ್ನ ಪೂಜೆ ಮಾಡಬೇಡಿ, ಪಕ್ಷ ಪೂಜೆ ಮಾಡಿ ಎಂದು ಹೇಳಿದ್ದೆ. ಈಗಲೂ ಅದಕ್ಕೆ ಬದ್ಧನಾಗಿದ್ದೇನೆ’ ಎಂದರು.

ADVERTISEMENT

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಗೆ ಶಿವಕುಮಾರ್‌ ಭಾಗವಹಿಸಿಲ್ಲ.

ಈ ಬಗ್ಗೆ ಸುದ್ದಿಗಾರರ ಕೇಳಿದಾಗ, ‘ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ನಾನು ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ನನ್ನನ್ನು ಅತಿಥಿಯಾಗಿ ಆಹ್ವಾನಿಸಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ದೇಶದ 75ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುತ್ತೇನೆ’ ಎಂದರು.

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ, ‘ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ. ಅವರು ವೈಯಕ್ತಿಕ ವಿಚಾರವಾಗಿ ಭೇಟಿ ನೀಡಿದ್ದಾರೋ ಅಥವಾ ರಾಜಕೀಯ ವಿಚಾರವಾಗಿ ಭೇಟಿ ಮಾಡಿದ್ದಾರೋ ನನಗೆ ಮಾಹಿತಿ ಇಲ್ಲ. ಶಾಸಕರು ಬೇರೆ ಪಕ್ಷಗಳ ನಾಯಕರನ್ನು ಭೇಟಿ ಮಾಡುವುದು ಸಹಜ. ಹಿರಿಯ ನಾಯಕರಿಗೆ ಗೌರವ ಸಲ್ಲಿಸಲು ಹೋಗಿರಬಹುದು’ ಎಂದರು.

‘ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಇರುವುದಿಲ್ಲ’ ಎಂಬ ಸಚಿವ ಆರ್. ಅಶೋಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಅವರು 10 ವರ್ಷಗಳ ನಂತರವಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದಾರೆ. ಅದಕ್ಕೆ ಸಂತೋಷವಾಗಿದೆ. ಸೋಲನ್ನು ಅವರು ಈಗಲೇ ಒಪ್ಪಿಕೊಳ್ಳುತ್ತಿದ್ದಾರಲ್ಲ, ಅಷ್ಟೇ ಸಾಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.