ADVERTISEMENT

ರಾಜಕೀಯ ಕುತೂಹಲ: ನಟ ಸುದೀಪ್ ಭೇಟಿ ಕುರಿತು ಡಿ.ಕೆ ಶಿವಕುಮಾರ್‌ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಫೆಬ್ರುವರಿ 2023, 13:26 IST
Last Updated 3 ಫೆಬ್ರುವರಿ 2023, 13:26 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ನಟ ಕಿಚ್ಚ ಸುದೀಪ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ನಟ ಕಿಚ್ಚ ಸುದೀಪ್   

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸುದೀಪ್ ಭೇಟಿ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಡಿಕೆಶಿ, ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್‌ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇಬ್ಬರು ಭೇಟಿಯಾಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ADVERTISEMENT

ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳು ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿವೆ. ಎಲ್ಲಾ ಪಕ್ಷಗಳು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿದ್ದು, ಪ್ರಮುಖರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸುದೀಪ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸುದೀಪ್ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.