ADVERTISEMENT

ಕಲಾವಿದರ ಅವಹೇಳನ ಮಾಡಿದರೆ ಕ್ರಮ: ಶಿವರಾಜ್ ತಂಗಡಗಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 15:55 IST
Last Updated 10 ಡಿಸೆಂಬರ್ 2025, 15:55 IST
ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ   

ಸುವರ್ಣ ವಿಧಾನಸೌಧ (ಬೆಳಗಾವಿ): ‘ಯಾವುದೇ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸುನಿಲ್‌ ಕುಮಾರ್‌ ಪ್ರಸ್ತಾಪಿಸಿದರು.

‘ಯಕ್ಷಗಾನಕ್ಕೆ ಧಾರ್ಮಿಕ ಸ್ಪರ್ಶ ಇದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ನೋಟಿಸ್ ನೀಡಿ ಸ್ಪಷ್ಟನೆ ಕೇಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಅವರೂ ದನಿಗೂಡಿಸಿದರು.

ADVERTISEMENT

ಅದಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, ‘ಅಧ್ಯಕ್ಷರನ್ನು ಕರೆಯಿಸಿ ಮಾತನಾಡಿದ್ದೇನೆ. ತಮ್ಮ ಹೇಳಿಕೆ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಅವರು ಪತ್ರಿಕೆಗಳಲ್ಲಿಯೂ ಮರು ಹೇಳಿಕೆ ನೀಡಿದ್ದಾರೆ. ಯಕ್ಷಗಾನದ ಬಗ್ಗೆ ನಮಗೂ ಗೌರವವಿದೆ. ಈ ರೀತಿಯ ಹೇಳಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಗಮನ ಹರಿಸಲಾಗುವುದು’ ಎಂದರು.

ಸ್ಥಳಾಂತರಗೊಂಡ ಕುಟುಂಬಗಳಿಗೆ ಸೂಕ್ತ ಪರಿಹಾರ

ಬೆಳಗಾವಿ (ಸುವರ್ಣ ವಿಧಾನಸೌಧ): ‘ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಸ್ಥಳಾಂತರಗೊಂಡಿರುವ ಕುಟುಂಬಗಳಿಗೆ ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಗಮನಸೆಳೆವ ಸೂಚನೆಗೆ ಉತ್ತರಿಸಿದ ಸಚಿವರು, ‘1,382 ಕುಟುಂಬಗಳಿಗೆ 2025ರಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, 670 ಕುಟುಂಬಗಳು ಸ್ಥಳಾಂತರಗೊಂಡಿವೆ. 356 ಕುಟುಂಬಗಳಿಗೆ ₹ 142 ಕೋಟಿ ಪರಿಹಾರ ನೀಡಲಾಗಿದೆ. 314 ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲಿ ಸಮಿತಿ ರಚಿಸಿ ಮನೆ ಜಮೀನಿನ ಮೌಲ್ಯಮಾಪನ ಮಾಡಿ 2025ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು’ ಎಂದರು.

‘82 ಕುಟುಂಬಗಳಿಗೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕೆಂದರೆ ₹ 1 ಸಾವಿರ ಕೋಟಿ ಬೇಕಾಗುತ್ತದೆ. ಇದಕ್ಕೆ ಒಪ್ಪಿದರೆ 670 ಕುಟುಂಬಗಳು ಇದೇ ಪರಿಹಾರ ಕೇಳಬಹುದು. ಇಷ್ಟು ಮೊತ್ತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.