ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೆ.28ರ ರಾಜ್ಯ ಬಂದ್‌ಗೆ ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆಸೆ.25ರಂದು ನಡೆದ ಮಾತುಕತೆ ವಿಫಲವಾಗಿದ್ದು, ಸೆ.28ಕ್ಕೆ ಕರೆ ನೀಡಲಾಗಿರುವ ಬಂದ್ ಮತ್ತಷ್ಟು ತೀವ್ರವಾಗಿ ನಡೆಯಲಿದೆ. ಅಲ್ಲದೆ, ಮುಖ್ಯಮಂತ್ರಿಯವರಿಗೆ ಕಂಡ ಕಂಡಲ್ಲಿ ಘೇರಾವ್ ಹಾಕಲಾಗುವುದು’ ಎಂದು ರೈತ, ದಲಿತ ಹಾಗೂ ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಹೇಳಿದೆ.
‘ರೈತರು, ಕಾರ್ಮಿಕ, ದಮನಿತ ಹಾಗೂ ಜನಸಾಮಾನ್ಯರ ಐಕ್ಯ ಹೋರಾಟದ ಮೂಲಕ ರೈತ ವಿರೋಧಿ ಸುಗ್ರೀವಾಜ್ಞೆ–ಮಸೂದೆಗಳನ್ನು ಹಿಂಪಡೆಯಲೇಬೇಕು ಎಂಬ ಸಂದರ್ಭವನ್ನು ಸೃಷ್ಟಿ ಮಾಡುತ್ತೇವೆ’ ಎಂದು ಅದು ಹೇಳಿದೆ.
ರಾಜ್ಯದ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ತಮ್ಮ ಸದಸ್ಯರಿಗೆ ಕರೆ ನೀಡಿದೆ.
‘ರೈತರ–ಕಾರ್ಮಿಕರ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದೇವೆ. ಹೋಟೆಲ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ’ ಎಂದು ಹೋಟೆಲ್ ಮಾಲೀಕರ ಸಂಘ ಹೇಳಿದೆ.
ರಾಜ್ಯ ಬಂದ್: ವಿವಿಧ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ರೈತ ಮತ್ತು ಕಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ ಕಾರಣ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೇರಿದಂತೆ 28ರಂದು ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನುಮುಂದೂಡಲಾಗಿದೆ.
ಎಸ್ಸೆಸ್ಸೆಲ್ಸಿಯ ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ಸೋಮವಾರ ನಡೆಯಬೇಕಿತ್ತು. ಬೆಂಗಳೂರು ವಿಶ್ವವಿದ್ಯಾಲಯ, ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಬೇಕಿತ್ತು.
ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಅನನುಕೂಲ ಆಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳು ತಿಳಿಸಿವೆ.
ಏನೇನಿರುತ್ತದೆ ?
* ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು
* ಆಸ್ಪತ್ರೆಗಳು, ಔಷಧ ಅಂಗಡಿಗಳು
* ಹೋಟೆಲ್‌ಗಳು, ಮೆಟ್ರೊ ರೈಲು, ವಿಮಾನ ಸೇವೆ
**
ಏನಿರುವುದಿಲ್ಲ ?
*ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸೇವೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ
*ಆಟೊ–ಟ್ಯಾಕ್ಸಿ ಸೇವೆ ಇರುವುದಿಲ್ಲ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.