ADVERTISEMENT

ಅಭಿವೃದ್ಧಿ: ಸಾರ್ವಜನಿಕ ಚರ್ಚೆಗೆ ಸಿದ್ಧ- ಎಚ್‌ಡಿಕೆ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ; ಎಚ್‌.ಡಿ.ಕುಮಾರಸ್ವಾಮಿ ಸವಾಲು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 19:00 IST
Last Updated 26 ನವೆಂಬರ್ 2019, 19:00 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಚಿಕ್ಕಬಳ್ಳಾಪುರ: ‘ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನನ್ನಿಂದ ಅನ್ಯಾಯ ಆಗಿದ್ದರೆ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರೊಂದಿಗೆ ಸಾರ್ವಜನಿಕವಾಗಿ ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ತಾಲ್ಲೂಕಿನ ನಂದಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್‌ ಅಭ್ಯರ್ಥಿ ರಾಧಾಕೃಷ್ಣ ಪರ ಪ್ರಚಾರಕ್ಕೆ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕುರಿ, ಮೇಕೆ, ಕೋಳಿ ಖರೀದಿಸುವಂತೆ ಬಿಜೆಪಿ ಮುಖಂಡರು ಶಾಸಕರಿಗೆ ಕೋಟ್ಯಂತರ ಹಣ ಕೊಟ್ಟು ಖರೀದಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕರ ಖರೀದಿ ಎನ್ನುವುದು ಚಾಳಿ ಆಗಿದೆ’ ಎಂದು ಟೀಕಿಸಿದರು.

ADVERTISEMENT

‘ಅಭಿವೃದ್ಧಿ ವಿಚಾರವಾಗಿ ಅನರ್ಹ ಶಾಸಕ ಡಾ.ಕೆ.ಸುಧಾಕರ್, ನನ್ನ ಹಾಗೂ ಜೆಡಿಎಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದ 14 ತಿಂಗಳಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ₹ 136 ಕೋಟಿ ಅನುದಾನ ನೀಡಿದ್ದೇನೆ’ ಎಂದರು.

‘ನಾವು ಅಧಿಕಾರಕ್ಕಾಗಿ ಕಾಂಗ್ರೆಸ್‌ ಮುಖಂಡರ ಮನೆ ಬಾಗಿಲಿಗೆ ಹೋಗಿರಲಿಲ್ಲ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರೇ ನನ್ನ ಮುಖ್ಯಮಂತ್ರಿ ಮಾಡಿದರು. ಆದರೆ, ಮೈತ್ರಿ ಸರ್ಕಾರ ರಚನೆಯಾದ ದಿನದಿಂದ ಈ ಅನರ್ಹ ಶಾಸಕರು ನನಗೆ ನಿತ್ಯ ಕಿರುಕುಳ ನೀಡಿದರು’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.